ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ವಿಧಾನಸಭೆಯಲ್ಲಿ ಸುದೀರ್ಘ ಸ್ಪಷ್ಟನೆ ನೀಡಿದ್ದಾರೆ. ಅರಣ್ಯ ಸಿಬ್ಬಂದಿ ಉದ್ದೇಶಪೂರ್ವಕವಾಗಿ ಶೂಟೌಟ್ ನಡೆಸಿಲ್ಲ, ಬದಲಾಗಿ ಆತ್ಮರಕ್ಷಣೆಗಾಗಿ ಮರುದಾಳಿ ನಡೆಸಿದ್ದಾರೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.
ಸದನದಲ್ಲಿ ಸಚಿವರು ಘಟನೆಗೆ ಸಂಬಂಧಿಸಿದಂತೆ ಮಾತನಾಡಿ, ಮೃತಪಟ್ಟವರು ತಮ್ಮ ಜಮೀನಿಗೆ ಹೋಗಿರಲಿಲ್ಲ. ಬದಲಾಗಿ, ಶಾಗ್ಯ ಬಳಿಯ ಅರಣ್ಯ ಪ್ರದೇಶದೊಳಗೆ ಸುಮಾರು 5 ರಿಂದ 8 ಕಿಲೋಮೀಟರ್ ಅಕ್ರಮವಾಗಿ ಪ್ರವೇಶಿಸಿದ್ದರು. ಹಿಂದಿನ ದಿನ ರಾತ್ರಿ ಅಕ್ರಮ ಪ್ರವೇಶದ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ 10 ಸಿಬ್ಬಂದಿಯನ್ನೊಳಗೊಂಡ ಎರಡು ತಂಡಗಳನ್ನು ರಚಿಸಲಾಗಿತ್ತು. ಮುಂಜಾನೆ 5 ಗಂಟೆಯ ಸುಮಾರಿಗೆ ಕತ್ತಲೆಯಲ್ಲಿ ಬಂಡೆಯೊಂದರ ಬಳಿ ಬೆಳಕು ಕಂಡುಬಂದಾಗ, ಶರಣಾಗುವಂತೆ ಸಿಬ್ಬಂದಿ ಸೂಚಿಸಿದ್ದರು.
ಎತ್ತರದ ಪ್ರದೇಶದಲ್ಲಿದ್ದ ಬೇಟೆಗಾರರು ಸಿಬ್ಬಂದಿಯತ್ತ ಮೊದಲು ಗುಂಡಿನ ದಾಳಿ ನಡೆಸಿದರು. ಈ ವೇಳೆ ಆತ್ಮರಕ್ಷಣೆಗಾಗಿ ಅರಣ್ಯ ಸಿಬ್ಬಂದಿ ಮರುದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಘಟನಾ ಸ್ಥಳದಿಂದ 2 ನಾಡಬಂದೂಕುಗಳು, ಕಾಡತೂಸುಗಳು, ಮದ್ದಿನ ಬಾಕ್ಸ್, ಪಟಾಕಿ, ಮೊಬೈಲ್ ಹಾಗೂ ಸುಮಾರು 20 ರಿಂದ 35 ಕೆಜಿಯಷ್ಟು ಜಿಂಕೆ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಯುತ್ತಿದ್ದು, ತನಿಖೆಯಲ್ಲಿ ಅರಣ್ಯ ಸಿಬ್ಬಂದಿ ನಿಯಮ ಮೀರಿ ಉದ್ದೇಶಪೂರ್ವಕವಾಗಿ ತಪ್ಪು ಎಸಗಿರುವುದು ಕಂಡುಬಂದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.
ಮತ್ತೊಂದೆಡೆ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಈ ಘಟನೆಯನ್ನು ಖಂಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ನೀಡಬೇಕು ಹಾಗೂ ಪ್ರಕರಣದ ಸತ್ಯಾಸತ್ಯತೆ ಹೊರಬರಲು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೆ, ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
