ತುಮಕೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಆಕೆ ಗರ್ಭಿಣಿಯಾಗಲು ಕಾರಣನಾದ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿ ಎಸ್ ಸಿ(ಪೋಕ್ಸೋ) ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ತುಮಕೂರು ಮಹಿಳಾ ಪೊಲೀಸ್ ಠಾಣಾ ಸರಹದ್ದಿನಲ್ಲಿ ಈ ಘಟನೆ ನಡೆದಿತ್ತು. ರಾಕೇಶ್ ಅಲಿಯಾಸ್ ರೇವಂತ್ ಎಂಬಾತ 13ವರೆ ವರ್ಷದ ನೊಂದ ಬಾಲಕಿಯನ್ನು ಪರಿಚಯ ಮಾಡಿಕೊಂಡು ಆಕೆಯ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ, ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದ. ಅಲ್ಲದೇ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ, ತಂದೆ ತಾಯಿಯನ್ನು ಸಾಯಿಸುವುದಾಗಿ ಬೆದರಿಕೆ ಹಾಕಿದ್ದ. ರಾಕೇಶ್ ನಡೆಸಿದ ಲೈಂಗಿಕ ದೌರ್ಜನ್ಯದಿಂದ ಬಾಲಕಿ ಗರ್ಭಿಣಿಯಾಗಿದ್ದಳು.
ಈ ಸಂಬಂಧ ದಾಖಲಾದ ಪ್ರಕರಣದ ತನಿಖಾಧಿಕಾರಿ ಡಾ.ನವೀನ್ ಕುಮಾರ್ ಎಂ.ಬಿ. ಅವರು ಘನ ನ್ಯಾಯಾಲಯಕ್ಕೆ ದೋಷಾರೋಪಣಾಪಟ್ಟಿ ಸಲ್ಲಿಸಿದರು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಅಭಿಯೋಜನೆಯ ಪರ ವಿಚಾರಣೆ ಮಾಡಲಾದ ಸಾಕ್ಷಿಗಳಿಂದ ಆರೋಪಿ ರಾಕೇಶ್ ಅಲಿಯಾಸ್ ರೇವಂತ್ ನ ಮೇಲಿರುವ ಆರೋಪ ಸಾಬೀತಾದ ಹಿನ್ನೆಲೆ, 20 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿಗಳ ದಂಡವನ್ನು ವಿಧಿಸಿ ತೀರ್ಪು ನೀಡಿದೆ.
ದಂಡದ ಮೊತ್ತದ 1 ಲಕ್ಷ ಹಾಗೂ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 10 ಲಕ್ಷ ರೂಪಾಯಿಗಳು ಒಟ್ಟಾರೆಯಾಗಿ ನೊಂದ ಬಾಲಕಿಗೆ 11 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್. ಅವರು ವಾದ ಮಂಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q