ತುಮಕೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ವಿರೋಧಿಸಿ ಹಾಗೂ ರೈತರ ಜಮೀನುಗಳಲ್ಲಿರುವ ಬೋರ್ವೆಲ್ ಮತ್ತು ತೆರೆದ ಬಾವಿಗಳ ನೀರನ್ನು ಕೃಷಿ ಚಟುವಟಿಕೆಗಳಿಗೆ ಉಪಯೋಗಿಸಿಕೊಳ್ಳಲು ಹಗಲು ಹೊತ್ತಿನಲ್ಲೂ ಲೋಡ್ ಸೆಟ್ಟಿಂಗ್ ಇಲ್ಲದೆ ಕನಿಷ್ಠ ಏಳು ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಎಂದು ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.
ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಧರಣಿಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ರಾಜ್ಯದ ಕಾವೇರಿ ನೀರನ್ನು ತಮಿಳುನಾಡಿನ ಡಿಎಂಕೆ ಪಕ್ಷದೊಂದಿಗೆ ಶಾಮೀಲಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಥೇಚ್ಛವಾಗಿ ನೀರುಹರಿಸಿ ರಾಜ್ಯದ ರೈತರಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.
ಈಗಾಗಲೇ ರಾಜ್ಯದ 143ಕ್ಕೂ ಹೆಚ್ಚು ತಾಲೂಕುಗಳಲ್ಲಿ ತೀವ್ರವಾದ ಬರಗಾಲ ಪರಿಸ್ಥಿತಿ ಉದ್ಭವಿಸಿದ್ದು ಯುದ್ಧೋಪಾದಿಯಲ್ಲಿ ಬರ ಪರಿಹಾರ ಕಾಮಗಾರಿಗಳನ್ನು ತೆಗೆದುಕೊಳ್ಳುವಲ್ಲಿ ಸರ್ಕಾರ ನಿರ್ಲಕ್ಷ್ಯ ಭಾವನೆ ತೋರಿದೆ ಎಂದು ಶಾಸಕ ಸುರೇಶ್ ಗೌಡ ಆರೋಪಿಸಿದರು.