ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ, ಸಮಾನತೆ ಹಾಗೂ ಏಕತೆ ಸಾರಿದ ಮಹಾನ್ ಗ್ರಂಥ ಭಾರತ ಸಂವಿಧಾನ ಎಂದು ಬೆಳಗಾವಿ ಉತ್ತರ ವಿಧಾನ ಸಭಾ ಮತ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್ ಅವರು ತಿಳಿಸಿದರು.
ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಶುಕ್ರವಾರ (ಜು.15) ರಾಜ್ಯಾದ್ಯಂತ ಏಕಕಾಲದಲ್ಲಿ ನಡೆದ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭ್ರಾತೃತ್ವದ ಉದಾತ್ತ ಚಿಂತನೆಗಳನ್ನು ಸಾರುವ ನಮ್ಮ ಸಂವಿಧಾನ ನಮ್ಮ ಹೆಮ್ಮೆ. ಸಂವಿಧಾನವನ್ನು ರಚಿಸಿದ ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳುವ ದಿನವಿದು, ಅವರ ಆಶಯಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು ಎಂದು ಹೇಳಿದರು.
ವಿವಿಧ ಇಲಾಖೆಯ ವಸತಿ ನಿಲಯಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಈ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಸಂತಸದ ವಿಷಯ. ಸಂವಿಧಾನ ಸರ್ವರಿಗೂ ಶಿಕ್ಷಣ, ಸಮಾನತೆಯ ಹಕ್ಕು ಕಲ್ಪಿಸಿದೆ. ಯಾವುದೇ ದೇಶದಲ್ಲಿಯೂ ಕೂಡಾ ಭಾರತ ದೇಶದ ನಾಗರಿಕರಿಗೆ ಇರುವಷ್ಟು ಸ್ವಾತಂತ್ರ್ಯವಿಲ್ಲ. ಭಾರತ ದೇಶ ವಿಶ್ವದಲ್ಲೇ ಮಾದರಿ ರಾಷ್ಟ್ರ ಎಂದು ಶಾಸಕ ಆಸೀಫ್ ರಾಜು ಸೇಠ್ ಅವರು ತಿಳಿಸಿದರು.
ಇದಕ್ಕೂ ಮೊದಲು ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಭಾರತದ ಸಂವಿಧಾನ ಪ್ರಸ್ತಾವನೆ ಜೀವನದ ನೀತಿ ಪಾಠ, ಮೌಲ್ಯಗಳ ಎತ್ತಿ ಹಿಡಿದು ಕಾರ್ಯನಿರ್ವಹಿಸಲು ನೆರವಾಗುತ್ತದೆ. ಸರ್ಕಾರದ ವಿವಿಧ ಇಲಾಖೆಯ ಕಾರ್ಯಕ್ರಮಗಳಲ್ಲಿ ಜಿಲ್ಲಾ ಮಟ್ಟದಿಂದ, ತಾಲೂಕು, ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಸಂವಿಧಾನ ಪೀಠಿಕೆ ಚಿತ್ರಣ ಇಡಲಾಗುವುದು ಎಂದು ಹೇಳಿದರು.
ಸಂವಿಧಾನ ಪೀಠಿಕೆ ವಾಚನ ಸಂವಿಧಾನ ಪ್ರಸ್ತಾವನೆ:
ಭಾರತದ ಜನಗಳಾದ ನಾವು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದೀ ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಅದರ ಸಮಸ್ತ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ; ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ್ಯ ; ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ ಅವರಲ್ಲಿ ಭ್ರಾತೃಭಾವನೆಯನ್ನು ವೃದ್ಧಿಗೊಳಿಸಲು ಶ್ರದ್ಧಾಪೂರ್ವಕ ಸಂಕಲ್ಪ ಮಾಡಿದವರಾಗಿ; ನಮ್ಮ ಸಂವಿಧಾನ ಸಭೆಯಲ್ಲಿ 1949ನೆಯ ಇಸವಿ ನವೆಂಬರ್ ತಿಂಗಳ ಇಪ್ಪತ್ತಾರನೆಯ ತಾರೀಖಾದ ಈ ದಿವಸ, ಈ ಮೂಲಕ ಈ ಸಂವಿಧಾನವನ್ನು ಅಂಗೀಕರಿಸಿ, ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ.