ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಇಂದು 60ನೇ ದಿನದ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ ಹಳೇ ಬಟ್ಟೆ ಸರ್ಕಾರ ಎಂದು ಆಕ್ರೋಶ ಹೊರಹಾಕಿದರು.
ಚಾಮರಾಜನಗರದ ಚಾಮರಾಜೇಶ್ವರ ದೇವಾಲಯದಿಂದ ಚಿಂದಿ ಬಟ್ಟೆಗಳನ್ನು ಹಿಡಿದು ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಭುವನೇಶ್ವರಿ ವೃತ್ತದ ತನಕ ಪ್ರತಿಭಟನಾ ರ್ಯಾಲಿ ನಡೆಸಿ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದರು.
ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಾಕಾರರು ಕಾವೇರಿ ನೀರನ್ನು ಹರಿಸುತ್ತಿರುವ ಸರ್ಕಾರ ಹಳೇ ಬಟ್ಟೆ ಸರ್ಕಾರವಾಗಿದೆ, ಅನ್ಯಾಯದ ಆದೇಶ ಕೊಡುತ್ತಿರುವ ಕಾವೇರಿ ನೀರು ನಿರ್ವಹಣಾ ಮಂಡಲಿ ಚಿಂದಿ ಸಮಿತಿಯಾಗಿದೆ ಎಂದು ಆಕ್ರೋಶ ಹೊರಹಾಕಿದರು.
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕ್ರಮವನ್ನು ಖಂಡಿಸಿ 60 ದಿನಗಳಿಂದ ಹೋರಾಟ ಮಾಡಿಕೊಂಡು ಬದಲಾಗುತ್ತಿದೆ, ಕಾವೇರಿ ನೀರು ಹರಿಸುವುದನ್ನು ನಿಲ್ಲಿಸುವ ತನಕ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಪ್ರತಿಭಟನಾಕಾರರು ಹೆದ್ದಾರಿಯಲ್ಲಿ ಚಿಂದಿ ಬಟ್ಟೆ ಸುರಿದು ಆಕ್ರೋಶ ಹೊರಹಾಕಿದರು.
ಕಾವೇರಿ ಜಲಾಶಯಗಳ ಕೊಳ್ಳದಲ್ಲಿ ನೀರು ಬರಿದಾಗುತ್ತಿದ್ದರೂ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸದೆ ಮೌನವಾಗಿದೆ. ತಮಿಳುನಾಡು ಸರ್ಕಾರ ಪದೇಪದೇ ಕಾವೇರಿ ನೀರಿನ ವಿಚಾರದಲ್ಲಿ ಕ್ಯಾತೆ ತೆಗೆದು ತೀಟೆ ತೀರಿಸಿಕೊಳ್ಳುತ್ತಿದೆ. ಕರ್ನಾಟಕ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ರೈತರ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಕೇಳಿಸಿಕೊಳ್ಳದ ಕಿವುಡು ಸರ್ಕಾರ ನಮ್ಮದಾಗಿದೆ ಎಂದು ಕಿಡಿಕಾರಿದರು. ಪ್ರತಿಭಟನೆಯಲ್ಲಿ ಚಾ.ರಂ. ಶ್ರೀನಿವಾಸಗೌಡ, ನಿಜಧ್ವನಿ ಗೋವಿಂದರಾಜು ಇನ್ನಿತರರು ಇದ್ದರು.