ತುಮಕೂರು: ನಿಂತಿದ್ದ ಕ್ರೂಸರ್ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರಿನ ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಇಂದು ಬೆಳಗ್ಗಿನ ಜಾವ ಈ ಅಪಘಾತ ಸಂಭವಿಸಿದೆ. ಕ್ರೂಸರ್ ಚಾಲಕ ಶಂಕರ್ (35), ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕ ಸತೀಶ್ (40) ಮೃತ ದುರ್ದೈವಿಗಳು. ಮೃತರು ಗಂಗಾವತಿ ಮೂಲದವರು ಅನ್ನೋ ಮಾಹಿತಿ ಲಭ್ಯವಾಗಿದೆ.
ಅಪಘಾತದಲ್ಲಿ ಇನ್ನೊರ್ವನಿಗೆ ಸಣ್ಣಪುಟ್ಟ ಗಾಯವಾಗಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಂಗಾವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕರಿಗೆ, ಕಮಿಷನ್ ಹಣ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಡೆಯಲಿರುವ ಪ್ರತಿಭಟನೆ ನಡೆಯುತ್ತಿದೆ. ಇಲ್ಲಿಗೆ ತೆರಳುತ್ತಿದ್ದ ವೇಳೆ ಕೋರ ಸಮೀಪ ಕ್ರೂಸರ್ ಕಾರಿನ ಹಿಂಬದಿಯ ಟೈಯರ್ ಪಂಚರ್ ಆಗಿತ್ತು. ಹೀಗಾಗಿ ಹೆದ್ದಾರಿ ಬದಿಯಲ್ಲಿ ಕಾರ್ ನಿಲ್ಲಿಸಿ ಟೈಯರ್ ಬದಲಿಸುತ್ತಿದ್ದ ವೇಳೆ ಅಪಘಾತ ನಡೆದಿದೆ. ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.