ಜಮ್ಮು ಮತ್ತು ಕಾಶ್ಮೀರದಲ್ಲಿ ಭೀಕರ ಅಪಘಾತ. ಬಸ್ ಕಂದರಕ್ಕೆ ಬಿದ್ದು 36 ಮಂದಿ ಸಾವನ್ನಪ್ಪಿದ್ದಾರೆ. ದೋಡಾ ಜಿಲ್ಲೆಯ ಅಜರ್ ಪ್ರದೇಶದ ಟ್ರಾಂಗಲ್ ಬಳಿ ಅಪಘಾತ ಸಂಭವಿಸಿದೆ. ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಕಿಶ್ತ್ವಾರ್ ನಿಂದ ಜಮ್ಮುವಿಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ವಾಹನ 250 ಮೀಟರ್ ಆಳಕ್ಕೆ ಬಿದ್ದಿದೆ. ಗಾಯಾಳುಗಳನ್ನು ದೋಡಾ ಮತ್ತು ಕಿಶ್ತ್ವಾರ್ ನ ಸರ್ಕಾರಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.
ಅಗತ್ಯ ಬಿದ್ದರೆ ಗಾಯಾಳುಗಳನ್ನು ಇತರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿದೆ. ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. “ಅಪಘಾತವು ನೋವಿನಿಂದ ಕೂಡಿದೆ. ಮೃತ ಕುಟುಂಬಗಳಿಗೆ ಸಂತಾಪ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪಿಎಂಒ ಟ್ವೀಟ್ ಮಾಡಿದೆ.
ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ಕೂಡ ಘೋಷಿಸಲಾಗಿದೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಕಾರ್ಯಾಲಯ ಪ್ರಕಟಿಸಿದೆ.