ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಿಸಲು ಮುಂದಿನ ತಿಂಗಳಿನಿಂದ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜೊತೆಗೆ ರಾಗಿ ಮಾಲ್ಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಡಿಡಿಪಿಐ, ಬಿಇಒಗಳು, ನೋಡಲ್ ಅಧಿಕಾರಿಗಳು ಮತ್ತು ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಮೊದಲ ಪರಿಶೀಲನಾ ಸಭೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದರು.
ಮುಂದಿನ ಮೂರು ವರ್ಷಗಳಲ್ಲಿ 3,000 ಕರ್ನಾಟಕ ಸಾರ್ವಜನಿಕ ಶಾಲೆಗಳನ್ನು (ಕೆಪಿಎಸ್) ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು.
ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಇದಕ್ಕಾಗಿ ಕಾರ್ಪೊರೇಟ್ ಸಾಮಾಜಿಕ ನಿಧಿ ಬಳಸಲಾಗುವುದು ಮತ್ತು ಇಲಾಖೆಯು ಅಜೀಂ ಪ್ರೇಮ್ಜಿ ಫೌಂಡೇಶನ್ನೊಂದಿಗೆ ಮಾತುಕತೆ ನಡೆಸುತ್ತಿದೆ. ಈ ಶಾಲೆಗಳ ಮೂಲಸೌಕರ್ಯಕ್ಕಾಗಿ 600 ಕೋಟಿ ರೂಪಾಯಿ ವೆಚ್ಚವನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.