ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರ 3 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶ ಹಾಗೂ ಜಿಲ್ಲೆಯ ಫಲಾನುಭವಿಗಳಿಗೆ ಸಾರ್ಥಕ ಸೇವೆಗಳ ಸಮರ್ಪಣೆ ಕಾರ್ಯಕ್ರಮವನ್ನು ಮೇ 20 ರ ಬದಲಾಗಿ ಮೇ 19ರಂದು ಒಂದು ದಿನ ಮುಂಚಿತವಾಗಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹಲವಾರು ಯೋಜನೆಗಳಿಗೆ ರಾಜ್ಯ ಸರ್ಕಾರ ಚಾಲನೆ ನೀಡಿ ಅವುಗಳನ್ನು ಆದ್ಯತಾ ಕಾರ್ಯಕ್ರಮಗಳಾಗಿ ತೆಗೆದುಕೊಂಡು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ.
ಈ ವಿಷಯವನ್ನು ಜನಸಮುದಾಯದೊಂದಿಗೆ ಹಂಚಿಕೊಳ್ಳಲು ಮೇ 20ರಂದು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸಮಾವೇಶ ನಿಗದಿಪಡಿಸಲಾಗಿತ್ತು. ಆದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಬೇಡಿಕೆ ಈಡೇರಿಸುವಂತೆ ಅಂದೇ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ತಿಳಿಸಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಬರುವ ಜನರಿಗೆ ತೊಂದರೆಯಾಗಬಾರದೆಂದು ಮುನ್ನಾ ದಿನ ಅಂದರೆ ಮೇ 19ರಂದೇ ಕಾರ್ಯಕ್ರಮ ಆಯೋಜಿಸಲು ಸಿಎಂ ಸೂಚನೆಯಂತೆ ಕ್ರಮ ವಹಿಸಲಾಗಿದೆ ಎಂದರು.
ಇದೇ ವೇಳೆ ತುಮಕೂರು ಜಿಲ್ಲೆಗೆ ಸಂಬಂಧಿಸಿದಂತೆ ಸುಮಾರು 682 ಕೋಟಿ ರೂ.ಗಳ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಉದ್ಘಾಟನೆ ನೆರವೇರಿಸಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.
ರಾಜ್ಯದಲ್ಲಿ 14 ಲಕ್ಷ ಮಂದಿಗೆ ಕಂದಾಯ ಇಲಾಖೆ ಸೌಲಭ್ಯ
ಕಂದಾಯ ಇಲಾಖೆಯಲ್ಲಿ ಬಹುಕಾಲದಿಂದ ಜಮೀನು ವಾರಸುದಾರರು ತಮ್ಮ ಹೆಸರಿ ಖಾತೆ ಪಹಣಿ, ಎಂ.ಆರ್.ಆಗದೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕಂದಾಯ ಇಲಾಖೆ ಕಳೆದ ಒಂದೂವರೆ ವರ್ಷದಲ್ಲಿ ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಿದ್ದು, ಮೇ 19ರ ಕಾರ್ಯಕ್ರಮದಲ್ಲಿ ಇ-ಪೋತಿ ಖಾತೆ, ದರಖಾಸ್ತು ಪೋಡಿ, ಕಂದಾಯ ಗ್ರಾಮ ಹಕ್ಕುಪತ್ರಗಳು, ಪಿಂಚಣಿ ಸೇರಿದಂತೆ ಸುಮಾರು 1,52,492 ಫಲಾನುಭವಿಗಳಿಗೆ ಹಕ್ಕುಪತ್ರ ಮತ್ತು ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ. ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಸುಮಾರು 14 ಲಕ್ಷ ಜನರಿಗೆ ಈ ಸೌಲಭ್ಯಗಳು ದೊರೆತಿವೆ ಎಂದು ಅವರು ತಿಳಿಸಿದರು.
ಈ ಕಾರ್ಯಕ್ರಮ ಸಂಪೂರ್ಣ ಸರ್ಕಾರಿ ಕಾರ್ಯಕ್ರಮವಾಗಿದ್ದು, ಪಕ್ಷಾತೀತ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಎಲ್ಲಾ ಮಂತ್ರಿಗಳು, ವಿರೋಧ ಪಕ್ಷದ ನಾಯಕರು, ಮುಖಂಡರು ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕೆ ತುಮಕೂರು ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಸುಮಾರು 2 ಲಕ್ಷಕ್ಕೂ ಹೆಚ್ಚು ಮಂದಿ ಆಗಮಿಸಲಿದ್ದು, ಅವರಿಗೆ ಬಸ್ಸುಗಳ ವ್ಯವಸ್ಥೆ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವೀಜ, ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಚಂದ್ರಶೇಖರಗೌಡ, ವಿಶೇಷಾಧಿಕಾರಿ ಡಾ. ನಾಗಣ್ಣ ಇತರರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


