ಚಿತ್ರದುರ್ಗ: ಸಂಸ್ಕೃತ ವೇದ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಿರುವ ಆಘಾತಕಾರಿ ವಿಡಿಯೋ ವೈರಲ್ ಆದ ಬೆನ್ನಲ್ಲೇ ಶಿಕ್ಷಕನ ವಿರುದ್ಧ ಕೇಸ್ ದಾಖಲಾಗಿದ್ದು, ಸದ್ಯ ಶಿಕ್ಷಕ ಪರಾರಿಯಾಗಿದ್ದಾನೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿರುವ ವೇದ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್ ಆದ ಹಿನ್ನೆಲೆ ಘಟನೆ ಬೆಳಕಿಗೆ ಬಂದಿದೆ. ಒಂಬತ್ತು ವರ್ಷದ ವಿದ್ಯಾರ್ಥಿಯನ್ನು ನೆಲಕ್ಕೆ ಕೆಡವಿ ಕಾಲಿನಿಂದ ಒದೆಯುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಬಾಲಕ ತನ್ನ ಅಜ್ಜಿಗೆ ಕರೆ ಮಾಡಲು ಮೊಬೈಲ್ ಫೋನ್ ಬಳಸಿದ್ದಾನೆ ಎಂಬ ಕಾರಣಕ್ಕೆ ಶಿಕ್ಷಕ ಈ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಘಟನೆ ಇತ್ತೀಚೆಗೆ ನಡೆದಿದೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪ್ರಸಾರವಾಗಲು ಪ್ರಾರಂಭಿಸಿದ ಕೂಡಲೇ ಶಿಕ್ಷಕ ನಾಪತ್ತೆಯಾಗಿದ್ದಾನೆ. ಪೊಲೀಸರು ಶಿಕ್ಷಕನಿಗಾಗಿ ಹುಡುಕಾಟ ನಡೆಸಿದ್ದಾರೆ.
ಗುರು ತಿಪ್ಪೇಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ್ ಅವರು ಘಟನೆ ಸಂಬಂಧ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ, ಪೊಲೀಸರು ವೀರೇಶ್ ಹಿರೇಮಠ್ ಎಂಬುವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ವಿಭಾಗಗಳ ಅಡಿ ಪ್ರಕರಣ ದಾಖಲಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC