ಬೆಂಗಳೂರು: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪರವರನ್ನು ಕೂಡಲೇ ಬಂಧಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ನಾಯಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಈಶ್ವರಪ್ಪ ವಿರುದ್ಧ ದೂರು ದಾಖಲಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ, ‘ನನ್ನ ಸಾವಿಗೆ ಸಚಿವ ಈಶ್ವರಪ್ಪನವರೇ ಕಾರಣವೆಂದು ಡೆತ್‌ನೋಟ್‌ನಲ್ಲಿ ಸಂತೋಷ್ ಪಾಟೀಲ್ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಈಶ್ವರಪ್ಪನವರನ್ನು ಬಂಧಿಸಬೇಕು.
ಇಲ್ಲದಿದ್ದರೆ ಅವರು ಸಾಕ್ಷಿ ನಾಶ ಮಾಡುವ ಸಾಧ್ಯತೆಯಿದೆ. ಸಚಿವರನ್ನು ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸಿದಾಗ ಮಾತ್ರ ಪ್ರಕರಣದ ಆಳ-ಅಗಲ ತಿಳಿಯಲಿದೆ’ ಎಂದು ಹೇಳಿದರು.‘ಗುತ್ತಿಗೆದಾರರಾಗಿದ್ದ ಸಂತೋಷ್‌ರವರು ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಳೆದ ವರ್ಷವೇ ಪ್ರಧಾನಿ ನರೇಂದ್ರ ಮೋದಿಯವರಿಗೆ ದೂರು ನೀಡಿದ್ದರು.
ಆಗಲೇ ಈಶ್ವರಪ್ಪರವರನ್ನು ಸಚಿವ ಸಂಪುಟದಿಂದ ವಜಾ ಮಾಡಿದ್ದರೆ, ನಾವಿಂದು ಸಂತೋಷ್‌ರವರನ್ನು ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ. ಆದರೆ ಆ ಸಂಬಂಧ ಯಾವುದೇ ತನಿಖೆ ನಡೆಯಲಿಲ್ಲ. ಭ್ರಷ್ಟ ಬಿಜೆಪಿಯ ಆಡಳಿತದಲ್ಲಿ ಪ್ರಾಮಾಣಿಕರ ಧ್ವನಿಗೆ ಬೆಲೆ ಇಲ್ಲವಾಗಿದೆ’ ಎಂದು ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು.
ವರದಿ ಆಂಟೋನಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


