ಕೇಂದ್ರ ಸರ್ಕಾರ ಘೋಷಿಸಿರುವ ಅಗ್ನಿಪಥ್ ಯೋಜನೆ ವಿರೋಧಿಸಿ ಇಂದೂ ಕೂಡ ದೇಶದ ಹಲವೆಡೆ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದೆ. ಬಿಹಾರದಲ್ಲಿ ರೊಚ್ಚಿಗೆದ್ದ ಗುಂಪು ವಾಹನಗಳಿಗೆ ಬೆಂಕಿ ಹಚ್ಚಿದೆ. ಮತ್ತೊಂದೆಡೆ ತಮಿಳುನಾಡು-ಪಂಜಾಬ್‌ನಲ್ಲೂ ಪ್ರತಿಭಟನೆಯ ಕಾವು ಮತ್ತಷ್ಟು ತೀವ್ರಗೊಂಡಿದ್ದು, ಮುನ್ನೆಚ್ಚೆರಿಕೆ ಕ್ರಮವಾಗಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ.
ನಿನ್ನೆ ಬಿಹಾರದಲ್ಲಿ ರೈಲುಗಳಿಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇಂದೂ ಕೂಡ ಅಗ್ನಿಪಥ್ ಯೋಜನೆ ವಿರೋಧಿಸಿ ಬಿಹಾರ ಬಂದ್‌ಗೆ ಕರೆ ನೀಡಲಾಗಿದೆ. ಬಿಹಾರದ ಸಂಘಟನೆಗಳು ಯೋಜನೆ ವಾಪಸ್ ಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ೭೨ ಗಂಟೆಗಳ ಕಾಲಾವಕಾಶ ನೀಡಿದೆ.
ಈ ಬಂದ್ ಗೆ ಆರ್ ಜೆಡಿ, ಮಹಾಘಟ ಬಂಧನ್ ಜತೆಗೆ ವಿವಿಧ ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿವೆ. ಬಂದ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಬಂದ್ ನಡುವೆಯೂ ಜೆಹನಾಬಾದ್‌ನಲ್ಲಿ ಉದ್ರಿಕ್ತ ಗುಂಪು ಬಸ್, ಟ್ರಕ್ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿದೆ.
ಯುವಕರನ್ನು ಸೇನೆಗೆ ಅಲ್ಪಾವಧಿಗಾಗಿ ನೇಮಕ ಮಾಡಿಕೊಳ್ಳುವ ಅಗ್ನಿಪಥ್ ಯೋಜನೆಯನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ಪ್ರಕಟಿಸಿತ್ತು. ಈ ಯೋಜನೆ ಖಂಡಿಸಿ ಮೂರು ದಿನಗಳಿಂದ ದೇಶದ ಹಲವೆಡೆ ವ್ಯಾಪಕ ಹಿಂಸಾಚಾರ ಸಂಭವಿಸಿ ಸಾರ್ವಜನಿಕ ಆಸ್ತಿಪಾಸ್ತಿಗಳ ಮೇಲೆ ದಾಳಿ ನಡೆದಿವೆ.
ಈ ಮಧ್ಯೆ ರಾಜಧಾನಿ ದೆಹಲಿಯಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಜಂತರ್-ಮಂಥರ್‌ನಲ್ಲಿ ಸತ್ಯಾಗ್ರಹ ನಡೆಸಲು ಮುಂದಾಗಿದೆ. ಸಂಸದರು, ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಇದೇ ವೇಳೆ ಸಿಕಂದರಾಬಾದ್ ರೈಲುನಿಲ್ದಾಣದಲ್ಲಿ ನಿನ್ನೆ ಹಿಂಸಾಚಾರ ಹತ್ತಿಕ್ಕಲು ಪೊಲೀಸರು ನಡೆಸಿದ ಗೋಲಿಬಾರ್‌ಗೆ ಮೃತಪಟ್ಟ ರಾಕೇಶ್ ಕುಟುಂಬಕ್ಕೆ ಮುಖ್ಯಮಂತ್ರಿ ಚಂದ್ರಶೇಖರರಾವ್ ೨೫ ಲಕ್ಷ ರೂ. ಪರಿಹಾರ ಪ್ರಕಟಿಸಿ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ನೀಡುವುದಾಗಿ ಘೋಷಿಸಿದ್ದಾರೆ.
ನಿನ್ನೆ ಸಿಕಂದರಾಬಾದ್ ರೈಲು ನಿಲ್ದಾಣದಲ್ಲಿ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ೧೦೦ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳನ್ನು ಬಂಧಿಸಲು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಆರೋಪಿಗಳ ವಿರುದ್ಧ ರೈಲ್ವೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ರಾಕೇಶ್ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಅನುಸರಿಸುತ್ತಿರುವ ತಪ್ಪು ನೀತಿಯಿಂದಾಗಿ ರಾಕೇಶ್ ಸಾವನ್ನಪ್ಪಿದ್ದಾರೆ. ತೆಲಂಗಾಣದ ಮಕ್ಕಳನ್ನು ಗರ್ಭದಲ್ಲಿಟ್ಟುಕೊಂಡು ಸರ್ಕಾರ ರಕ್ಷಿಸಲಿದೆ ಎಂದು ಹೇಳಿದರು.
ಪಂಜಾಬ್‌ನಲ್ಲೂ ಯೋಜನೆಗೆ ವಿರೋಧ ವ್ಯಕ್ತವಾಗಿದ್ದು, ಸಂಯುಕ್ತ ಕಿಸಾನ್ ಮೋರ್ಚಾ ಶೀಘ್ರದಲ್ಲೇ ಯೋಜನೆ ವಿರೋಧಿಸಿ ಬೀದಿಗಿಳಿದು ಹೋರಾಟ ಮಾಡಲಿದೆ ಎಂದು ಎಚ್ಚರಿಕೆ ನೀಡಿದೆ.
ರಾಷ್ಟ್ರೀಯ ಭದ್ರತೆ ಮತ್ತು ಭಾರತೀಯ ಸೇನೆಯ ಹಿತದೃಷ್ಠಿಯಿಂದ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿ ಕೇಂದ್ರ ಸರ್ಕಾರ ಜಾರಿ ಮಾಡಿರುವ “ಅಗ್ನಿಪಥ” ಯೋಜನೆ ಪರಾಮರ್ಶೆ ಮಾಡುವಂತೆ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಜೊತೆಗೆ ಅಗ್ನಿಪಥ ಯೋಜನೆ ಕುರಿತಂತೆ ದೇಶದ ವಿವಿಧ ಭಾಗಗಳಲ್ಲಿ ನಡೆದ ಹಿಂಸಾಚಾರ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ ಎಸ್‌ಐಟಿ ರಚನೆ ಮಾಡುವಂತೆ ಸರ್ವೋಚ್ಛ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿದೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB