ಬೆಂಗಳೂರು: ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದು, ಇಂದು ಶಾಸಕ ಜಮೀರ್ ಅಹ್ಮದ್ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಕಂಟೋನ್ಮೆಂಟ್ ರೈಲ್ವೇ ನಿಲ್ದಾಣ ಬಳಿ ಇರುವ ಮನೆ ಸೇರಿದಂತೆ ಐದು ಕಡೆಗಳಲ್ಲಿ ಏಕಕಾಲಕ್ಕೆ ರೇಡ್ ಮಾಡಲಾಗಿದೆ.
ಜಾರಿ ನಿರ್ದೇಶನಾಲಯದ ವರದಿಯ ಆಧಾರದ ಮೇಲೆ ಜಮೀರ್ ವಿರುದ್ಧ ಅಕ್ರಮ ಆಸ್ತಿ ಪ್ರಕರಣ ದಾಖಲಿಸಿಕೊಂಡ ಎಸಿಬಿ ಇಂದು ದಾಳಿ ನಡೆಸಿ ತನಿಖೆ ನಡೆಸುತ್ತಿದೆ. ಕಂಟೋನ್ಮೆಂಟ್ ರೈಲ್ವೇ ನಿಲ್ದಾಣ ಬಳಿಯ ನಿವಾಸ, ಸಿಲ್ವರ್ ಓಕ್ ಅಪಾರ್ಟ್ಮೆಂಟ್‌ನಲ್ಲಿರುವ ಫ್ಲಾಟ್, ಸದಾಶಿವನಗರದಲ್ಲಿರುವ ಗೆಸ್ಟ್ ಹೌಸ್, ಬನಶಂಕರಿಯಲ್ಲಿರುವ ಜಿ ಕೆ ಅಸೋಸಿಯೇಟ್ಸ್ ಕಚೇರಿ ಮತ್ತು ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
ಎಸಿಬಿ ಅಧಿಕಾರಿಗಳು ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಬಂಬೂಬಜಾರ್‌ನ ಮನೆ ಬಳಿ ಭಾರೀ ಭದ್ರತೆ ಕೈಗೊಳ್ಳಲಾಗಿದೆ.
ಐಎಂಎ ಕೇಸ್ ಸಂಬಂಧ ಇಡಿ ಎಸಿಬಿಗೆ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಸಜಮೀರ್‌ಗೆ ಐಎಂಎ ಉರುಳು ಬಿಟ್ಟುಬಿಡದೆ ಕಾಡುತ್ತಿದೆ ಎನ್ನಬಹುದು.
ಇನ್ನು ಈ ಪ್ರಕರಣದ ತನಿಖೆಗಾಗಿ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ)ವನ್ನೂ ಸಹ ರಚನೆ ಮಾಡಿತ್ತು. ಈ ಪ್ರಕರಣದಲ್ಲಿ ಅನೇಕರನ್ನು ಈಗಾಗಲೇ ಬಂಧಿಸಿ ತನಿಖೆಯನ್ನೂ ಸಹ ನಡೆಸಲಾಗಿದೆ. ಸದ್ಯ ಈ ಪ್ರಕರಣ ತನಿಖೆಯ ಹಂತದಲ್ಲಿಯೇ ಇದ್ದು, ಇದೀಗ ಎಸಿಬಿ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


