ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಕಳೆದ ವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಆದಾಯಕ್ಕಿಂತ ಎರಡು ಸಾವಿರ ಪಟ್ಟು ಜಾಸ್ತಿ ಆಸ್ತಿ ಹೊಂದಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ೮೭ ಕೋಟಿ ಹೆಚ್ಚುವರಿ ಆಸ್ತಿಯ ಸಮರ್ಪಕ ದಾಖಲೆಗಳನ್ನು ಒದಗಿಸುವಂತೆ ಎಸಿಬಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ದಾಳಿ ನಡೆದ ಮಾರನೇ ದಿನವೇ ಕಚೇರಿಗೆ ಬಂದು ದಾಖಲೆ ಒದಗಿಸುವಂತೆ ಎಸಿಬಿ ಅಧಿಕಾರಿಗಳು ತಿಳಿಸಿದ್ದು, ಬಕ್ರೀದ್ ಕಾರಣ ನೀಡಿ ಜಮೀರ್ ಕಾಲಾವಕಾಶ ಪಡೆದಿದ್ದರು. ಸದ್ಯ ಬಕ್ರೀದ್ ಮುಗಿದ ಕಾರಣ ಜಮೀರ್ ದಾಖಲೆ ಸಮೇತ ಎಸಿಬಿ ಅಧಿಕಾರಿಗಳ ಮುಂದೆ ಹಾಜರಾಗಬೇಕಿದೆ.
ಈ ನಡುವೆ ಆದಾಯಕ್ಕಿಂತ ಶೇ.೨೦೩೧ ಪಟ್ಟು ಹೆಚ್ಚು ಅಕ್ರಮ ಆಸ್ತಿಯನ್ನು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಸಂಪಾದಿಸಿದ್ದಾರೆ ಎಂದು ರಾಜ್ಯ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಜಾರಿ ನಿರ್ದೇಶನಾಲಯ (ಇ.ಡಿ.) ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಿತ್ತು.
ಇಡಿ ವರದಿ ಆಧರಿಸಿ ಜಮೀರ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಎಸಿಬಿ, ಜಮೀರ್ ಅವರ ಸಾಮ್ರಾಜ್ಯದ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ದಾಖಲೆಗಳನ್ನು ಜಪ್ತಿ ಮಾಡಿತ್ತು. ಜಮೀರ್ ಅವರು .೮೭.೪೪ ಕೋಟಿ (ಶೇ.೨೦೩೧) ಅಕ್ರಮ ಆಸ್ತಿ ಹೊಂದಿರುವ ಬಗ್ಗೆ ಇಡಿ ಉಲ್ಲೇಖಿಸಿದ್ದು, ಈ ವರದಿ ಆಧರಿಸಿ ಶಾಸಕರ ವಿರುದ್ಧ ತನಿಖೆ ನಡೆಸಲು ಮುಂದಾಗಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇರೆಗೆ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣ ಸಮೀಪ ಬಂಬೂ ಬಜಾರ್‌ನಲ್ಲಿರುವ ಜಮೀರ್ ಅವರ ವೈಭವೋಪೇತ ಮನೆ, ಸದಾಶಿವ ನಗರದಲ್ಲಿರುವ ಅತಿಥಿ ಗೃಹ, ಕಲಾಸಿಪಾಳ್ಯದಲ್ಲಿನ ಅವರ ಒಡೆತನದ ನ್ಯಾಷನಲ್ ಟ್ರಾವೆಲ್ಸ್ ಕಂಪನಿಯ ಕಚೇರಿ, ಓಕಾ ಅಪಾರ್ಚ್‌ಮೆಂಟ್ ಫ್ಲ್ಯಾಟ್ ಹಾಗೂ ಬನಶಂಕರಿಯ ಜಿ.ಕೆ.ಅಸೋಸಿಯೇಟ್ಸ್ ಕಚೇರಿ ಸೇರಿ ಐದು ಸ್ಥಳಗಳ ಮೇಲೆ ಎಸಿಬಿ ದಾಳಿ ನಡೆಸಿತ್ತು. ಐಎಂಐ ಬಹುಕೋಟಿ ವಂಚನೆ ಪ್ರಕರಣದ ತನಿಖೆ ವೇಳೆ ಶಾಸಕ ಜಮೀರ್ ಅವರ ಆಸ್ತಿ ಬಗ್ಗೆ ಇಡಿ ಪತ್ತೆ ಹಚ್ಚಿತ್ತು.
ಜಮೀರ್ ಅವರು ದಾಳಿ ವೇಳೆ ತಮ್ಮ ಆಸ್ತಿ ಪಾಸ್ತಿ ಕುರಿತು ಲೆಕ್ಕಪರಿಶೋಧಕರ ವರದಿಯನ್ನು ಎಸಿಬಿಗೆ ಸಲ್ಲಿಸಿದ್ದಾರೆ. ಈ ವರದಿ ಕುರಿತು ಸತ್ಯಾಸತ್ಯತೆ ಪರಿಶೀಲನೆಗೆ ಪ್ರತ್ಯೇಕವಾಗಿ ಲೆಕ್ಕಪರಿಶೋಧನೆಗೆ ಎಸಿಬಿ ಕಳುಹಿಸಿದೆ ಎಂದು ಮೂಲಗಳು ಹೇಳಿವೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


