ಪ್ರತಿವರ್ಷ ಕಿತ್ತೂರು ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅನುಕೂಲವಾಗುವಂತೆ ಕನಿಷ್ಠ ಐದು ಕೋಟಿ ರೂಪಾಯಿ ಶಾಶ್ವತ ಅನುದಾನವನ್ನು ಪ್ರತ್ಯೇಕವಾಗಿ ತೆಗೆದಿರಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರಕಾರದ ಗಮನಸೆಳೆದು ಶಾಶ್ವತ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ಶಾಸಕ ಮಹಾಂತೇಶ್ ದೊಡ್ಡಗೌಡ್ರ ಹೇಳಿದರು.
ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಆಚರಿಸುವುದಕ್ಕೆ ಸಂಬಂಧಿಸಿದಂತೆ ಕಿತ್ತೂರಿನ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಸೋಮವಾರ(ಆ.22) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಂಬರುವ ದಿನಗಳಲ್ಲಿ ಶಾಸಕರು ಹಾಗೂ ಸರಕಾರಗಳು ಬದಲಾದಾಗ ಅನುದಾನಕ್ಕಾಗಿ ಅಲೆದಾಡುವ ಪರದಾಟ ತಪ್ಪಲಿದೆ ಎಂದು ಶಾಸಕ ಮಹಾಂತೇಶ್ ದೊಡ್ಡಗೌಡ್ರ ಹೇಳಿದರು. ಕನಿಷ್ಠ ಐದು ಕೋಟಿ ರೂಪಾಯಿ ತೆಗೆದಿರಿಸಲು ಎಲ್ಲ ರೀತಿಯ ಪ್ರಯತ್ನವನ್ನು ಮಾಡಲಾಗುವುದು ಎಂದು ಭರವಸೆಯನ್ನು ನೀಡಿದರು.
ವೀರಜ್ಯೋತಿಯನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಲು ಅನುಕೂಲವಾಗುವಂತೆ ಯೋಜನೆ ರೂಪಿಸಲಾಗುವುದು. ಹಂಪಿ ಉತ್ಸವ, ದಸರಾ ಮಾದರಿಯಲ್ಲಿ ವಿಜೃಂಭಣೆಯಿಂದ ಕಿತ್ತೂರು ಉತ್ಸವ ಆಚರಿಸುವ ನಿಟ್ಟಿನಲ್ಲಿ ಸಲಹೆ ನೀಡಲಾಗಿದೆ. ಉತ್ಸವದ ಅವಧಿಯನ್ನು ಹೆಚ್ಚಿಸುವ ಕುರಿತು ಪರಿಶೀಲಿಸಲಾಗುವುದು ಎಂದು ಹೇಳಿದರು.
ಮಹಿಳೆಯರಿಗಾಗಿ ಒಂದು ದಿನ ವಿಶೇಷ ಕಾರ್ಯಕ್ರಮ ಒದಗಿಸಬೇಕು ಆಶಯವಿದೆ. ಅದೇ ರೀತಿ ದಸರಾ ಕ್ರೀಡಾಕೂಟ ಮಾದರಿಯಲ್ಲಿ ಕಿತ್ತೂರು ಉತ್ಸವದಲ್ಲಿ ಆಯೋಜಿಸಲು ಸಲಹೆ ನೀಡಲಾಗಿದೆ.
ಖೇಲೋ ಇಂಡಿಯಾ ಯೋಜನೆಯಡಿ 6-7 ಕೋಟಿ ರೂಪಾಯಿ ಅನುದಾನ ಸಿಗುತ್ತದೆ. ಇದನ್ನು ಬಳಸಿಕೊಳ್ಳಲು ಅನುಕೂಲವಾಗುವಂತೆ 17 ಎಕರೆ ಜಮೀನನ್ನು ಈಗಾಗಲೇ ಕ್ರೀಡಾ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದರು.
ಉತ್ಸವದ ಉದ್ಘಾಟನೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗುವುದು. ಮಾನ್ಯ ಪ್ರಧಾನಮಂತ್ರಿಗಳು ಅಥವಾ ರಾಷ್ಟ್ರಪತಿ ಅವರನ್ನು ಆಹ್ವಾನಿಸುವ ಕುರಿತು ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು ಎಂದು ಶಾಸಕ ಮಹಾಂತೇಶ್ ದೊಡ್ಡಗೌಡ್ರ ಹೇಳಿದರು.
ಚೆನ್ನಮ್ಮನ ಕೋಟೆಯ ಪ್ರತಿರೂಪ ನಿರ್ಮಾಣಕ್ಕೆ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದರು.
ಕೋಟೆಯ ಸುತ್ತಮುತ್ತಲಿನ ಕಂದಕ ಕುರಿತು ಸಮಗ್ರ ಸಮೀಕ್ಷೆ ಕೈಗೊಂಡು ಚೆನ್ನಮ್ಮನ ಕೋಟೆಯ ಪ್ರತಿರೂಪವನ್ನು ನಿರ್ಮಿಸಲು ಜಾಗೆಯನ್ನು ಅಂತಿಮಗೊಳಿಸಲು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಕೆಲಸ ನಡೆದಿದೆ ಎಂದರು.
ಅಂತಿಮ ವರದಿಯನ್ನು ಆಧರಿಸಿ ಸ್ವತಃ ಮುಖ್ಯಮಂತ್ರಿಗಳೇ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಶಾಸಕ ದೊಡ್ಡಗೌಡ್ರ ಸಭೆಯಲ್ಲಿ ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ್, ಕಿತ್ತೂರು ಅಭಿವೃದ್ದಿ ಪ್ರಾಧಿಕಾರದ ಸದಸ್ಯರಾದ ಚನ್ನಪ್ಪ ಮುತ್ನಾಳ, ಉಳವಪ್ಪ ಉಳ್ಳಾಗಡ್ಡಿ, ಡಿಡಿಪಿಐ ಬಸವರಾಜ ನಾಲತವಾಡ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಸಯೀದಾ ಆಫ್ರಿನ್ ಬಾನು ಬಳ್ಳಾರಿ, ಡಿಎಚ್ಓ ಡಾ.ಮಹೇಶ್ ಕೋಣ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


