ಸರಗೂರು: ಪಟ್ಟಣದ ಸರಕಾರಿ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ನೂತನವಾಗಿ ನಿರ್ಮಾಣ ವಾಗುತ್ತಿರುವ ಶಾಲಾ ಕಟ್ಟಡ ಕಾಮಗಾರಿ ಕಳಪೆಯಾಗಿದ್ದು, ಅಧಿಕಾರಿಗಳು ತಕ್ಷಣವೇ ತನಿಖೆ ನಡೆಸಬೇಕು ಎಂದು ಪಟ್ಟಣ ಪಂಚಾಯತಿ ಸದಸ್ಯ ಶ್ರೀನಿವಾಸ್ ಒತ್ತಾಯಿಸಿದ್ದಾರೆ.
ಕಟ್ಟಡ ಕಾಮಗಾರಿಯ ಜವಾಬ್ದಾರಿಯನ್ನು ಲೋಕೋಪಯೋಗಿ ಇಲಾಖೆಗೆ ವಹಿಸಲಾಗಿದ್ದು, ಇಲಾಖೆಗೆ ಎಂಜಿನಿಯರ್ ಧ್ರುವರಾಜ್ ಅವರು ಗುತ್ತಿಗೆದಾರನೊಂದಿಗೆ ಶಾಮಿಲಾಗಿ ಆರಂಭದಿಂದಲೂ ಕಟ್ಟಡ ಕಾಮಗಾರಿಯನ್ನು ಕಳಪೆಯಾಗಿ ನಿರ್ಮಿಸಿದ್ದಾರೆ ಎಂದು ಅವರು ಆರೋಪಿಸಿದರು.
ತಕ್ಷಣವೇ ಕಾಮಗಾರಿಯನ್ನು ನಿಲ್ಲಿಸಲು ಎಂಜಿನಿಯರ್ ಧ್ರುವ ರಾಜ್, ಗುತ್ತಿಗೆದಾರನಿಗೆ ಆದೇಶಿಸಬೇಕು ಎಂದು ಒತ್ತಾಯಿಸಿದ ಅವರು, ಕಳಪೆ ಕಾಮಗಾರಿಯ ಬಗ್ಗೆ ಪ್ರಶ್ನಿಸಿದರೆ, ಧ್ರುವ ರಾಜ ಅವರು ಉಡಾಫೆ ಉತ್ತರ ನೀಡುತ್ತಿದ್ದಾರೆ. ಕಾಮಗಾರಿ ನಿಲ್ಲಿಸಲು ಶಾಸಕರ ಗಮನಕ್ಕೆ ತರಲಾಗಿದೆ ಎಂದರೂ ಶಾಸಕರ ಮಾತಿಗೂ ಕ್ಯಾರೆ ಎನ್ನುತ್ತಿಲ್ಲ ಎಂದು ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದರು.
ಕಾಮಗಾರಿ ನಿಲ್ಲಿಸುವುದಿಲ್ಲ, ಯಾರಿಗೆ ಬೇಕಾದರೂ ಹೇಳಿಕೊಳ್ಳಿ ಎಂದು ಬೇಜವಾಬ್ದಾರಿಯ ಉತ್ತರ ನೀಡುವ ಮೂಲಕ ಶಾಸಕರಿಗೂ ಧ್ರುವ ರಾಜ್ ಅಗೌರವ ತೋರಿದ್ದಾರೆ. ಹೀಗಾಗಿ ಎಂಜಿನಿಯರ್ ವಿರುದ್ದ ಸೂಕ್ತಕ್ರಮ ವಹಿಸಬೇಕು. ಕಾಮಗಾರಿ ನಿಲ್ಲಿಸಬೇಕು. ಗುತ್ತಿಗೆದಾರನನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಅವರು ಒತ್ತಾಯಿಸಿದರು.
ಕಟ್ಟಡ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಶಾಲಾ ಮಕ್ಕಳಿಗೆ ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆಯ ಸಂದರ್ಭದಲ್ಲಿ ಕೂಡ ಕಾಮಗಾರಿ ನಿಲ್ಲಿಸಿಲ್ಲ. ಕಾಮಗಾರಿಗೆ ಬಳಸುವ ಯಂತ್ರಗಳ ಕರ್ಕಶ ಶಬ್ದದಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನಾನುಕೂಲವಾಗುತ್ತಿದೆ. ಈ ಬಗ್ಗೆ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಶ್ರೀ ನಿವಾಸ್ ಆರೋಪಿಸಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


