ಮಧುಗಿರಿ: ಸರ್ಕಾರಿ ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಸಹ ಶಿಕ್ಷಕನಿಗೆ ಗ್ರಾಮಸ್ಥರು ಥಳಿಸಿ, ಪೊಲೀಸರಿಗೆ ಒಪ್ಪಿಸಿದ ಘಟನೆ ತಾಲೂಕಿನ ದೊಡ್ಡೇರಿ ಹೋಬಳಿಯ ರಂಗಾಪುರ ಪಂಚಾಯ್ತಿಯ ಗ್ರಾಮ ಬೋರಗುಂಟೆ ಶಾಲೆಯಲ್ಲಿ ನಡೆದಿದೆ.
ಶಾಲೆಯ ಸಹ ಶಿಕ್ಷಕ ಮಂಜುನಾಥ್ ಎಂಬವನು ಪ್ರತಿನಿತ್ಯ ವಿದ್ಯಾರ್ಥಿನಿಯರ ಮೈಮುಟ್ಟಿ ಅಸಭ್ಯ ವರ್ತನೆ ತೋರುತ್ತಿದ್ದ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ವಿದ್ಯಾರ್ಥಿನಿಯರು ತಮ್ಮ ಪೋಷಕರ ಬಳಿ ವಿಚಾರ ತಿಳಿಸಿದ್ದು, ಇದರಿಂದ ಆಕ್ರೋಶಗೊಂಡ ಪೋಷಕರು ಶಾಲೆ ಆರಂಭಕ್ಕೆ ಮುನ್ನವೇ ಶಿಕ್ಷಕನನ್ನು ತಡೆದು ವಿಚಾರಿಸಿದ್ದಲ್ಲದೇ ಶಿಕ್ಷಕನಿಗೆ ಥಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾ ಧಿಕಾರಿ ತಿಮ್ಮರಾಜು, ಬಡವ ನಹಳ್ಳಿ ಸಿಪಿಐ ಹನುಮಂತರಾಯಪ್ಪ, ಸಿಡಿಪಿಒ ಅನಿತಾ ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ಈ ಬಗ್ಗೆ ವಿಚಾರಣೆ ನಡೆಸಿದಾಗ ಸತ್ಯ ಬಯಲುಗೊಂಡಿದೆ. ಇಂತಹ ಹೀನ ಕೃತ್ಯಕ್ಕೆ ಒಳಗಾದ ಶಾಲೆಯ ವಿದ್ಯಾರ್ಥಿಗಳು ಇಷ್ಟು ದಿವಸ ತಾವು ಅನುಭವಿಸಿದ ನೋವು ಸಂಕಷ್ಟಗಳನ್ನು ಇಲಾಖೆಯ ಮೇಲಧಿಕಾರಿಗಳ ಮುಂದೆ ಸಂಪೂರ್ಣ ವಿಚಾರ ತಿಳಿಸಿದರು.
ಇದೇ ವೇಳೆ ವಿದ್ಯಾರ್ಥಿಗಳ ಪೋಷಕರು ಶಾಲೆಯ ಮುಂದೆ ಘೋಷಣೆ ಕೂಗಿ ಶಿಕ್ಷಕನನ್ನು ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.
ಸದ್ಯ ಆರೋಪಿ ಶಿಕ್ಷಕನನ್ನು ಬಂಧಿಸಿರುವ ಬಡವನಹಳ್ಳಿ ಪೊಲೀಸ್ ಠಾಣೆ ಪೊಲೀಸರು ಪೋಕ್ಸೋ ಕಾಯ್ದೆಯಡಿಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ವರದಿ: ಆಬಿದ್, ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA