ರಾಜಕಾಲುವೆ ಒತ್ತುವರಿ ತೆರವುಗೊಳಿಸುವ ನಿಟ್ಟಿನಲ್ಲಿ ಈ ಹಿಂದೆ ನೀಡಿದ್ದ ನಿರ್ದೇಶನಗಳ ಅನ್ವಯ ಸಮಗ್ರ ನಿಯಮಗಳನ್ನು ಜಾರಿ ಮಾಡದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಕೆರೆ-ರಾಜಕಾಲುವೆಗಳ ಸಂರಕ್ಷಣೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ, ‘ಸಿಟಿಜನ್ ಆ್ಯಕ್ಷನ್ ಗ್ರೂಪ್’ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
‘ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡು ಕಟ್ಟಡಗಳ ನಿರ್ಮಾಣ ಮಾಡುವ ಸಂದರ್ಭದಲ್ಲಿ ಯಾವುದೇ ಕ್ರಮಕ್ಕೆ ಮುಂದಾಗದೆ ಕೈ ಕಟ್ಟಿ ಕುಳಿತುಕೊಂಡಿದ್ದ ಅಧಿಕಾರಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಅಂಶವನ್ನು ಬಿಬಿಎಂಪಿ ತಿಳಿಸಿಲ್ಲ’ ಎಂದು ನ್ಯಾಯಪೀಠ ಬೇಸರ ವ್ಯಕ್ತಪಡಿಸಿದೆ.
‘ಒತ್ತುವರಿ ತೆರವು ಸಂದರ್ಭದಲ್ಲಿ ಕಾರ್ಯಾಚರಣೆಗೆ ಅಡ್ಡಿಪಡಿಸಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಅಧಿಕಾರಿಗಳು ತಿಳಿಸಿದ್ದರೂ, ಅಂತಹ ಅಧಿಕಾರಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಅಂಶವನ್ನು ವಿವರಿಸಿಲ್ಲ’ ಎಂದು ಹೇಳಿದೆ.
ವೈಜ್ಞಾನಿಕ ಸಲಹೆಗಳನ್ನು ಪಡೆದುಕೊಂಡು ಸಮಗ್ರವಾದ ಯೋಜನೆ ರೂಪಿಸಿ ಎಂದು ಬಿಬಿಎಂಪಿಗೆ ಈ ಹಿಂದೆ ನಿರ್ದೇಶನ ನೀಡಲಾಗಿದ್ದರೂ ಪಾಲಿಕೆ ಅಧಿಕಾರಿಗಳು ನಿರೀಕ್ಷೆಯಂತೆ ಸಮಗ್ರ ಯೋಜನೆಯನ್ನು ಜಾರಿಗೊಳಿಸಿಲ್ಲ ಎಂದು ಅತೃಪ್ತಿ ಹೊರಹಾಕಿದ್ದು, ವಿಚಾರಣೆಯನ್ನು ಆಗಸ್ಟ್ 1ಕ್ಕೆ ಮುಂದೂಡಿದೆ.
ಹಾಜರಿಗೆ ನಿರ್ದೇಶನ ‘ಮುಂದಿನ ವಿಚಾರಣೆ ವೇಳೆ ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಹುದ್ದೆಗಿಂತ ಮೇಲಿನ ಅಧಿಕಾರಿಗಳು ವಿಚಾರಣೆಗೆ ಖುದ್ದು ಹಾಜರಾಗಬೇಕು’ ಎಂದು ನ್ಯಾಯಪೀಠ ಇದೇ ವೇಳೆ ನಿರ್ದೇಶಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


