ರಾಜ್ಯದಲ್ಲಿ ಪರಿಶಿಷ್ಟ ಜಾತಿ (ಎಸ್. ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್. ಟಿ)ಮಕ್ಕಳ ಶಾಲಾ ನೋಂದಣಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್. ಸಿ. ಮಹಾದೇವಪ್ಪ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.
ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ (ಟಿಎಸ್‌ಪಿ) ಅನುದಾನ ಹಂಚಿಕೆ ಕುರಿತು ಬುಧವಾರ ನಡೆದ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಎಸ್. ಸಿ ಮತ್ತು ಎಸ್. ಟಿ ಮಕ್ಕಳ ಶಾಲಾ ಪ್ರವೇಶಾತಿಯ ಪ್ರಮಾಣವು ಕರ್ನಾಟಕದಲ್ಲಿ ಉಳಿದ ರಾಜ್ಯಗಳಿಗಿಂತ ಕಡಿಮೆ ಇದೆ. ಈ ಪ್ರಮಾಣವನ್ನು ಹೆಚ್ಚಿಸಲು ಶ್ರಮಿಸಬೇಕು’ ಎಂದರು. ಶಿಕ್ಷಣ ಹಕ್ಕು ಕಾಯ್ದೆಯ ಅಡಿಯಲ್ಲಿ ಈಗ ಒಂದರಿಂದ ಎಂಟನೇ ತರಗತಿಯವರೆಗೆ ಉಚಿತ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತಿದೆ.
ಅದನ್ನು ಒಂಬತ್ತು ಮತ್ತು ಹತ್ತನೇ ತರಗತಿಗಳಿಗೂ ವಿಸ್ತರಿಸುವ ಕುರಿತು ಪರಿಶೀಲಿಸಬೇಕು. ಎಸ್‌ಸಿಎಸ್‌ಪಿ ಮತ್ತು ಟಿಎಸ್ಎಪಿ ಅನುದಾನವನ್ನು ಶಿಕ್ಷಣಕ್ಕೆ ಸಂಬಂಧಿಸಿದ ಕೆಲಸಗಳಿಗೆ ಹೆಚ್ಚು ಬಳಕೆ ಮಾಡಬೇಕು. ವಿದ್ಯಾರ್ಥಿನಿಲಯಗಳ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ನಿರ್ದೇಶನ ನೀಡಿದರು.
ಈ ಯೋಜನೆಗಳ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಬೇಕು. ತಪ್ಪಿದಲ್ಲಿ ಅಂತಹ ಇಲಾಖೆಗಳಿಂದ ಅನುದಾನ ಹಿಂಪಡೆಯಲಾಗುವುದು. ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಗಳ ಅನುದಾನವನ್ನು ಅನ್ಯ ಉದ್ದೇಶಗಳಿಗೆ ಬಳಕೆ ಮಾಡುವುದನ್ನು ನಿಷೇಧಿಸಲಾಗಿದೆ. ಈ ತಿದ್ದುಪಡಿಯನ್ನು ಗಮನದಲ್ಲಿ ಇರಿಸಿಕೊಂಡು ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಹೇಳಿದರು.
ಜಲ ಜೀವನ್ ಮಿಷನ್ ಕಾಮಗಾರಿಗಳಿಗೆ ಕೇಂದ್ರದಿಂದ ಶೇಕಡ 50ರಷ್ಟು ಅನುದಾನವನ್ನು ಜನವರಿಯೊಳಗೆ ಪಡೆಯಬೇಕು. ಇಲ್ಲವಾದರೆ ರಾಜ್ಯದಿಂದ ನೀಡುತ್ತಿರುವ ಹೆಚ್ಚುವರಿ ಅನುದಾನವನ್ನು ಹಿಂಪಡೆಯಲಾಗುವುದು. ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರಿಗೆ ಕಡ್ಡಾಯವಾಗಿ 100 ದಿನಗಳ ಉದ್ಯೋಗ ನೀಡಬೇಕು ಎಂದು ಸೂಚಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


