ಕೇಂದ್ರ ಸರ್ಕಾರವು ಸರ್ವಾಧಿಕಾರ ನಡೆಸುತ್ತಿದೆ. ಸ್ವಾಯತ್ತ ಸಂಸ್ಥೆಗಳನ್ನು ಹಿಡಿತಕ್ಕೆ ತೆಗೆದುಕೊಂಡು ತನ್ನ ವಿರೋಧಿ ಪಕ್ಷದ ಸರ್ಕಾರಗಳನ್ನು ಕಟ್ಟಿಹಾಕುತ್ತಿದೆ. ಇದಕ್ಕೆ ಸಾಕ್ಷಿಯಾಗಿ ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿ ದೆಹಲಿ ಸುಗ್ರಿವಾಜ್ಞೆಯನ್ನು ತಂದಿದೆ. ದೆಹಲಿಯನ್ನು ಸಂಪೂರ್ಣವಾಗಿ ಗವರ್ನರ್ ಕೈಗಿಡುವ ಮೂಲಕ ರಾಜ್ಯ ಸರ್ಕಾರದ ಅಧಿಕಾರವನ್ನು ಮೊಟಕುಗೊಳಿಸುತ್ತಿದೆ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.
ತಮಿಳುನಾಡಿನಲ್ಲಿ ಮಂತ್ರಿಗಳನ್ನೇ ರಾಜ್ಯಪಾಲರು ವಜಾ ಮಾಡಿದ್ದಾರೆ. ರಾಜ್ಯಪಾಲರಿಗೆ ಮಂತ್ರಿಗಳನ್ನು ವಜಾಗೊಳಿಸುವ ಹಕ್ಕು ಇಲ್ಲ. ರಾಜಕೀಯ ಇತಿಹಾಸದಲ್ಲೇ ಇಂತಹ ಘಟನೆ ನಡೆದಿರಲಿಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
2024ರ ಲೋಕಸಭೆ ಚುನಾವಣೆಗೂ ಮುನ್ನ ಹಾಲಿ ಮುಖ್ಯ ಚುನಾವಣಾ ಆಯುಕ್ತರು ನಿವೃತ್ತರಾಗುತ್ತಿದ್ದಾರೆ. ಅದಕ್ಕೂ ಮೊದಲೇ ತನಗೆ ಬೇಕಾದ ಮುಖ್ಯ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವಂತಹ ಸಂದರ್ಭವನ್ನು ಸೃಷ್ಟಿ ಮಾಡಿಕೊಳ್ಳುವ ಹುನ್ನಾರವನ್ನು ಕೇಂದ್ರ ಸರ್ಕಾರ ನಡೆಸಿದೆ ಎಂದು ಎಎಪಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಗಂಭೀರ ಆರೋಪ ಮಾಡಿದ್ದಾರೆ.
ಮೊದಲು ಆಯ್ಕೆ ಸಮಿತಿಯಲ್ಲಿ ಮುಖ್ಯ ನ್ಯಾಯಮೂರ್ತಿ, ಪ್ರಧಾನಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರು ಇರುತ್ತಿದ್ದರು. ಈ ಕಾಯ್ದೆಯನ್ನು ವಜಾಗೊಳಿಸಿರುವ ಕೇಂದ್ರ ಸರ್ಕಾರ ಹೊಸ ಮಸೂದೆಯನ್ನು ಹೊರಡಿಸಿದೆ. ಇದರ ಪ್ರಕಾರ ಮುಖ್ಯ ಚುನವಣಾ ಆಯುಕ್ತರನ್ನು ಆಯ್ಕೆ ಮಾಡುವ ಸಮಿತಿಗೆ ಪ್ರಧಾನಮಂತ್ರಿ ಮುಖ್ಯಸ್ಥರಾಗಿರುತ್ತಾರೆ. ಓರ್ವ ಸಂಪುಟದ ಸಚಿವ ಹಾಗೂ ವಿರೋಧ ಪಕ್ಷದ ಓರ್ವ ಸದಸ್ಯ ಇರುತ್ತಾರೆ. ಈ ಮೂಲಕ ಸುಲಭವಾಗಿ ತನಗೆ ಬೇಕಾದ ವ್ಯಕ್ತಿಯನ್ನೇ ಪ್ರಮುಖ ಸ್ಥಾನಕ್ಕೆ ಕೂರಿಸುವ ಮೂಲಕ ಚುನಾವಣೆಯನ್ನು ಗೆಲ್ಲಲು ಪ್ರಯತ್ನಿಸುತ್ತಿದೆ ಎಂದರು.


