ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (ಕೆಪಿಸಿಸಿ) ಹೆಸರಿನಲ್ಲಿ ನಕಲಿ ವೆಬ್ ಸೈಟ್ ಸೃಷ್ಟಿಸಿದ್ದ ಮೂವರು ಆರೋಪಿಗಳನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವೆಂಕಟೇಶ್, ಧರಣೇಶ್ ಹಾಗೂ ಸಿದ್ದಾರ್ಥ್ ಎಂದು ಗುರುತಿಸಲಾಗಿದೆ.
ಕೆಪಿಸಿಸಿ ಹೆಸರಿನಲ್ಲಿ ನಕಲಿ ವೆಬ್ ಸೈಟ್ ಸೃಷ್ಟಿಸಿ, ಅದರ ಮೂಲಕ ಕಾಂಗ್ರೆಸ್ ಪಕ್ಷ ಹಾಗೂ ಪಕ್ಷದ ನಾಯಕರಿಗೆ ಅಗೌರವ ತರುವಂತಹ ಹೇಳಿಕೆಗಳನ್ನು ಪ್ರಕಟಿಸಲಾಗುತ್ತಿದೆ ಎಂದು ಕೆಪಿಸಿಸಿ ಕಾನೂನು ವಿಭಾಗದ ಕಾರ್ಯಕಾರಿ ಸಮಿತಿ ಸದಸ್ಯ ಶತಭಾಷ್ ಶಿವಣ್ಣ ಕಳೆದ ಫೆಬ್ರವರಿಯಲ್ಲಿ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದರು.
ಈ ಸಂಬಂಧ ಅಂದಿನ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಯವರಿಗೂ ದೂರು ಸಲ್ಲಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದರು. ದೂರಿನನ್ವಯ ಐಟಿ ಆ್ಯಕ್ಟ್ ಹಾಗೂ ಐಪಿಸಿ ಸೆಕ್ಷನ್‌ನಡಿ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರ್ ಕೈಂ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಅವರಲ್ಲಿ ಮೂವರ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದ್ದು, ಠಾಣಾ ಜಾಮೀನಿನ ಆಧಾರದಲ್ಲಿ ನೋಟಿಸ್ ನೀಡಿ ಕಳಿಸಲಾಗಿದೆ ಎಂದು ಸಿಸಿಬಿಯ ಜಂಟಿ ಪೊಲೀಸ್ ಆಯುಕ್ತ ಡಾ. ಎಸ್ ಡಿ ಶರಣಪ್ಪ ತಿಳಿಸಿದ್ದಾರೆ.


