“ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ ಎಂದರೆ ಪ್ರತಿ ನಿಲ್ದಾಣದಲ್ಲೂ ಬಸ್ ಇಳಿದು ಹತ್ತುವಂತೆ ಮಾಡುವುದಲ್ಲ, ಒಮ್ಮೆ ಹತ್ತಿದರೆ ಕಡೆಯ ತನಕವೂ ಇರುವಂತಹ ದೃಢ ನಿರ್ಧಾರ ಮಾಡಬೇಕು. ಬಸ್ ಹತ್ತುವುದು, ಇಳಿಯುವುದು ಮಾಡಬಾರದು. ಮಾಡಿದರೆ ಆಗ ನಮ್ಮ ಬೆಲೆಯನ್ನೇ ಕಳೆದುಕೊಳ್ಳುತ್ತೇವೆ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜೆಡಿಎಸ್ ನಾಯಕ ಮಾಜಿ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ಪಕ್ಷದಲ್ಲಿ ಹೆಚ್ಚು ಕಾಲ ಇದ್ದಷ್ಟು ಹಿರಿತನ, ಜವಾಬ್ದಾರಿ ಮತ್ತು ಗೌರವ ಬರುತ್ತದೆ. ಬರುವುದು, ಹೋಗುವುದು ಮಾಡಿದರೆ ನಾಯಕತ್ವಕ್ಕೂ ಧಕ್ಕೆಯಾಗುತ್ತದೆ. ಈ ಮಾತನ್ನು ಕೇವಲ ಇಂದು ಪಕ್ಷ ಸೇರ್ಪಡೆಯಾದ ಶಿವಮೊಗ್ಗ ಜಿಲ್ಲೆಯವರಿಗೆ ಮಾತ್ರ ಹೇಳುತ್ತಿಲ್ಲ, ರಾಜ್ಯದ ಸಮಸ್ತ ಕಾರ್ಯಕರ್ತರು, ಮುಖಂಡರಿಗೆ ಕಿವಿ ಮಾತು ಹೇಳುತ್ತಿದ್ದೇನೆ” ಎಂದು ತಿಳಿಸಿದರು.


