ಬೆಂಗಳೂರು: ಸಂಪೂರ್ಣ ಬಹುಮತ ಪಡೆದ ಸರ್ಕಾರ ಯಾವ ರೀತಿ ಅಡಳಿತ ಆರಂಭ ಮಾಡಿ ಯಾವ ರೀತಿ ದಿಕ್ಸೂಚಿ ನೀಡಬೆಕಾಗಿತ್ತು ಅದರ ಬದಲು ದಿಕ್ಕುತಪ್ಪಿದ ಸರ್ಕಾರ ಇದಾಗಿದೆ.
ಸರ್ಕಾರ ಗೊಂದಲದಲ್ಲಿ ಸಿಲುಕಿ ಮಾತಿಗೆ ತಪ್ಪಿದ ಸರ್ಕಾರ ಇದಾಗಿದೆ ಎಂದು ಮಾಜಿ ಸಿಎಂ ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಸರ್ಕಾರವನ್ನ ಟೀಕಿಸಿದ್ದಾರೆ.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣಕಾಸಿನ ವ್ಯವಸ್ಥೆಯನ್ನು ಹಳಿ ತಪ್ಪಿಸಿದೆ. ನಾವು ಸರಪ್ಲಸ್ ಬಜೆಟ್ ಮಂಡನೆ ಮಾಡಿದ್ದೇವು ಇವರು ಬಂದ ಮೇಲೆ 8 ಸಾವಿರ ಕೋಟಿ ಸಾಲ ಮಾಡಿದ್ದಾರೆ. ಸುಮಾರು 35 ಸಾವಿರ ಕೋಟಿ ತೆರಿಗೆ ಹೆಚ್ಚಳ ಮಾಡಿದ್ದಾರೆ. ಒಟ್ಟು 45 ಸಾವಿರ ಕೋಟಿ ತೆರಿಗೆ ಮೂಲಕ ಸಂಗ್ರಹಿಸುವ ಅವಕಾಶ ಮಾಡಿಕೊಂಡು 12 ಸಾವಿರ ಕೋಟಿ ಡೆಪಸಿಟ್ ಹೆಚ್ಚಳ ಮಾಡಿಕೊಂಡಿದ್ದಾರೆ.
ನಾವು ಕೋವಿಡ್ ನಂತರ ಸರ್ ಪ್ಲಸ್ ಬಜೆಟ್ ಮಾಡಿದ್ದೇವು. ಇವರು ಕೋವಿಡ್ ಸ್ಥಿತಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಸಾರಿಗೆ ನೌಕರರ ಸಂಬಳ ವಿಳಂಬವಾಗುತ್ತಿದೆ. ಇವರು ಬಂದ ಮೇಲೆ ಒಂದು ಕಿ.ಮೀ. ರಸ್ತೆಯನ್ನೂ ಮಾಡಿಲ್ಲ.
ರಾಜ್ಯದಲ್ಲಿ ಬರಗಾಲ ಬಂದರೂ ರೈತರ ಕಡೆ ತಿರುಗಿ ನೋಡಿಲ್ಲ. ಎರಡು ಬಾರಿ ಬಿತ್ತನೆ ಮಾಡಿದ್ದರೂ ಬೆಳೆ ಬಾರದೇ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಎರಡು ತಿಂಗಳಲ್ಲಿ 50 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿಂದಿನ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 4500 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಳ್ಳದಂತೆ ತಡೆಯಬೇಕಿದೆ. ಸಾಲ ವಸೂಲಿ ನಿಲ್ಲಿಸಬೇಕು. ಕೃಷಿ ಇಲಾಖೆಯಲ್ಲಿ ಟ್ರಾನ್ಸ್ ಫರ್ ಸುಗ್ಗಿ ನಡೆಯುತ್ತಿದೆ. ಎಲ್ಲ ಇಲಾಖೆಗಳಲ್ಲಿ ಟ್ರಾನ್ಸ್ ಫರ್ ಸುಗ್ಗಿ ನಡೆಯುತ್ತಿದೆ ಎಂದರು.


