ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ರಾಷ್ಟ್ರೀಯ ವ್ಯಾಪ್ತಿಯಲ್ಲಿ ಹಾದು ಹೋಗಿರುವ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ನಡೆದ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಐವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ಇಂದು ಬೆಳಗಿನ ಜಾವ ಟಾಟಾ ಏಸ್, ಕ್ಯಾಂಟರ್ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿಯಾಗಿದೆ. ಟಾಟಾ ಏಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ದುರ್ದೈವಿಗಳು ಕಲ್ಬುರ್ಗಿ ಜಿಲ್ಲೆ ಅರಳಗುಡಿ ಗ್ರಾಮದ ಭೀಮಾಬಾಯಿ (70), ಮಹಾಂತಪ್ಪ (50) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ವಾಸವಿದ್ದ ಇವರ ಕುಟುಂಬ ನಿವೃತ್ತಿಯ ಬಳಿಕ ಸ್ವಗ್ರಾಮಕ್ಕೆ ಮನೆಯ ಸಾಮಾನು ಸಾಗಿಸುವ ವೇಳೆ ಅಪಘಾತ ಸಂಭವಿಸಿದೆ.
ಚಿಕ್ಕನಹಳ್ಳಿ ಬಳಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಾಹನ ದಟ್ಟಣೆ ಉಂಟಾಗಿದ್ದು, ಈ ವೇಳೆ ಮುಂದೆ ಹೋಗುತ್ತಿದ್ದ ಕ್ಯಾಂಟರ್ಗೆ ಟಾಟಾ ಏಸ್ ಡಿಕ್ಕಿ ಹೊಡೆದಿದೆ. ನಂತರ ಹಿಂಬದಿಯಿಂದ ಟಾಟಾ ಏಸ್ಗೆ ಖಾಸಗಿ ಬಸ್ ಬಂದು ಡಿಕ್ಕಿಯಾಗಿದೆ. ಏಸ್ನಲ್ಲಿದ್ದವರು ಕ್ಯಾಂಟರ್ ಹಾಗೂ ಬಸ್ ನಡುವೆ ಸಿಲುಕಿ ನಜ್ಜುಗುಜ್ಜಾಗಿದೆ.
ಗಾಯಾಳುಗಳಿಗೆ ಕಳ್ಳಂಬೆಳ್ಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಅಪಘಾತ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕೆಲ ಸಮಯ ಸಂಚಾರ ವ್ಯತ್ಯಯ ಉಂಟಾಗಿದ್ದು, ಕಳ್ಳಂಬೆಳ್ಳ ಪೊಲೀಸರು ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದ್ದಾರೆ. ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


