ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಉದ್ಘಾಟಿಸಿದರು.
ಬಳಿಕ 2023-24ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ 43 ಶಿಕ್ಷಕರಿಗೆ ಸಿಎಂ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಾಗಿ ಪ್ರೌಢಶಾಲಾ ವಿಭಾಗದಿಂದ ಧಾರವಾಡದ ಸುರೇಶ್ ಮುಗಳಿ ಸೇರಿದಂತೆ 11 ಶಿಕ್ಷಕರನ್ನು ಆಯ್ಕೆ ಮಾಡಲಾಗಿದ್ದು, ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಉತ್ತಮ ಶಿಕ್ಷಕರ ಪಟ್ಟಿಯಲ್ಲಿರುವ ಮಹಿಳಾ ಶಿಕ್ಷಕರುಗಳಿಗೆ ಅಕ್ಷರ ಮಾತೆ ಸಾವಿತ್ರಿಬಾಯಿ ಫುಲೆ ಇವರ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಾಸಕರಾದ ರಿಜ್ವಾನ್ ಅರ್ಷದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಸೇರಿದಂತೆ ಹಲವು ಮಂದಿ ಹಾಲಿ, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.


