ಜೆಡಿಎಸ್ ಪಕ್ಷದ ಸಾವಿರಾರು ಕಾರ್ಯಕರ್ತರನ್ನು ಪಕ್ಷಕ್ಕೆ ಬರ ಮಾಡಿಕೊಳ್ಳಲು ಮೈಸೂರಿನಿಂದ ಓಡೋಡಿ ಬಂದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಜೆಡಿಎಸ್ ಪಕ್ಷದ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾಲನ ಓಟದಲ್ಲಿ ಯಾವುದೂ ಶಾಶ್ವತವಲ್ಲ, ಬಿಜೆಪಿ- ಜೆಡಿಎಸ್ ಗೆಳೆಯರಿಗೆ ಈ ಮಾತನ್ನು ಹೇಳುತ್ತಿದ್ದೇನೆ. ಜನರ ಸೇವೆಯೇ ಜನಾರ್ದನ ಸೇವೆ ಎಂದು ನಾವೆಲ್ಲಾ ಕೆಲಸ ಮಾಡಬೇಕಿದೆ ಎಂದರು.
ಜೆಡಿಎಸ್ ನ ಹಲವು ಮುಖಂಡರು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಮ್ಮುಖದಲ್ಲಿ ಶಿವಮೊಗ್ಗದ ಜೆಡಿಎಸ್ ಮುಖಂಡ ಶ್ರೀಕಾಂತ್, ತುಮಕೂರಿನ ಮಾಜಿ ಶಾಸಕ ಶಫಿ ಅಹ್ಮದ್, ಮಾಜಿ ಮೇಯರ್ ನಾಗರಾಜ್, ಪಾಲಾಕ್ಷ, ಫಾರ್ಜಾನ ತಮ್ಮ ಬೆಂಬಲಿಗರ ಜತೆ ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯ ಇಂದಿರಾ ಭವನದಲ್ಲಿ ನಡೆದ ಕಿಕ್ಕಿರದ ಸಮಾರಂಭದಲ್ಲಿ ಮುಖಂಡರನ್ನು ಪಕ್ಷದ ಬಾವುಟ ನೀಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಡಿ. ಕೆ. ಶಿವಕುಮಾರ್ ಸ್ವಾಗತಿಸಿದರು. ಪಕ್ಷದ ಸಿದ್ಧಾಂತ ಒಪ್ಪಿ ಬರುವವರಿಗೆ ಸ್ವಾಗತ ಎಂದರು.


