ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಜಾರಿ ನಿರ್ದೇಶನಾಲಯ ಸಮನ್ಸ್ ದೆಹಲಿ ಮದ್ಯ ನೀತಿ ಭ್ರಷ್ಟಾಚಾರ ಪ್ರಕರಣದಲ್ಲಿ ಸಮನ್ಸ್ ಕಳುಹಿಸಲಾಗಿದೆ. ನವೆಂಬರ್ 2 ರಂದು ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ಸೂಚಿಸಲಾಗಿದೆ.
ಏತನ್ಮಧ್ಯೆ, ದೆಹಲಿ ಮದ್ಯ ನೀತಿ ಹಗರಣದಲ್ಲಿ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಮತ್ತೊಂದು ಹೊಡೆತ ಬಿದ್ದಿದೆ. ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ ಇದರೊಂದಿಗೆ 6-8 ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸುವಂತೆಯೂ ನ್ಯಾಯಾಲಯ ಸೂಚಿಸಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರನ್ನೊಳಗೊಂಡ ನ್ಯಾಯಪೀಠ ಈ ತೀರ್ಪು ನೀಡಿದೆ. ವಿಚಾರಣೆ ವಿಳಂಬವಾದರೆ ಸಿಸೋಡಿಯಾ ಮತ್ತೊಮ್ಮೆ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ದ್ವಿಸದಸ್ಯ ಪೀಠ ಹೇಳಿದೆ. ಈ ಪ್ರಕರಣದಲ್ಲಿ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿತ್ತು. ಅವರ ವಿರುದ್ಧ ಸಿಬಿಐ ಮತ್ತು ಇಡಿ ಎರಡು ಪ್ರಕರಣಗಳಿವೆ.
ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿರುವುದು ಎಎಪಿ ನಾಯಕತ್ವ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂಬುದನ್ನು ತೋರಿಸುತ್ತದೆ ಎಂದು ಬಿಜೆಪಿ ಸಂಸದ ಮನೋಜ್ ತಿವಾರಿ ಪ್ರತಿಕ್ರಿಯಿಸಿದ್ದಾರೆ. ಎಎಪಿ ನಾಯಕತ್ವ ಭ್ರಷ್ಟಾಚಾರದಲ್ಲಿ ತೊಡಗಿರುವುದರಿಂದ ಅರವಿಂದ್ ಕೇಜ್ರಿವಾಲ್ ಅವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಅವರು ಹೇಳಿದರು.


