ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ಮಹಿಳೆ ಮತ್ತು ಆಕೆಯ ಐದು ವರ್ಷದ ಮಗಳು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮನೆಯೊಳಗೆ ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಮೃತರನ್ನು ಅನಿತಾ ದೇವಿ (29) ಮತ್ತು ಅವರ ಪುತ್ರಿ ಸೋನಿ ಕುಮಾರಿ ಎಂದು ಗುರುತಿಸಲಾಗಿದೆ. ಬಳ್ಳಾಪುರ ಗ್ರಾಮದ ನಿವಾಸದಲ್ಲಿ ಇಬ್ಬರ ಶವಗಳು ಪತ್ತೆಯಾಗಿವೆ ಎಂದು ಬಕ್ಸರ್ ಪೊಲೀಸ್ ವರಿಷ್ಠಾಧಿಕಾರಿ ಮನೀಶ್ ಕುಮಾರ್ ತಿಳಿಸಿದ್ದಾರೆ. ಘಟನೆ ನಡೆದಾಗ ಅನಿತಾ ಅವರ ಪತಿ ಇರಲಿಲ್ಲ. ಮೃತದೇಹಗಳನ್ನು ಮೊದಲು ಕಂಡವರು ಪುತ್ರರು. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನೆ ನಡೆದ ಸ್ಥಳದಿಂದ ವಶಪಡಿಸಿಕೊಂಡ ವಸ್ತುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಯಾರನ್ನೂ ಬಂಧಿಸಿಲ್ಲ ಎಂದು ಎಸ್ಪಿ ತಿಳಿಸಿದ್ದಾರೆ.


