ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ವೈದ್ಯಕೀಯ ಕಡ್ಡಾಯ ಗ್ರಾಮೀಣ ಸೇವಾ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನ ಸಭೆಯಲ್ಲಿ ತಿದ್ದುಪಡಿ ಮಸೂದೆ ಮಂಡಿಸಿದ್ದಾರೆ.
ಮಸೂದೆಯಲ್ಲಿ ‘ಒಂದು ವರ್ಷದ ಕಡ್ಡಾಯ ಗ್ರಾಮೀಣ ಸೇವೆ’ ಎಂಬ ಪದಗಳ ಮೊದಲಿಗೆ ‘ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಲಾದಂತೆ ಅಸ್ತಿತ್ವದಲ್ಲಿರುವ ಖಾಲಿ ಹುದ್ದೆಗಳಲ್ಲಿ‘ ಎಂಬ ಪದಗಳನ್ನ ಸೇರಿಸುವ ಮೂಲಕ ತಿದ್ದುಪಡಿ ತರಲಾಗುತ್ತಿದೆ. ಈ ಮೂಲಕ ಖಾಲಿ ಇರುವ ಹುದ್ದೆಗಳಿಗೆ ಮಾತ್ರ ವೈದ್ಯರ ಕಡ್ಡಾಯ ಸೇವೆಯನ್ನ ಬಳಸಿಕೊಳ್ಳಲು ಆರೋಗ್ಯ ಇಲಾಖೆ ಮುಂದಾಗಿದೆ.
ಈ ಹಿಂದೆ ವೈದ್ಯರ ಕಡ್ಡಾಯ ಗ್ರಾಮೀಣ ಸೇವೆ ಕಾಯ್ದೆ ಜಾರಿಗೆ ತಂದ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇತ್ತು. ಹೀಗಾಗಿ ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದವರು. ಒಂದು ವರ್ಷ ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಿ ಸರ್ಟಿಫಿಕೇಟ್ ಪಡೆಯಬೇಕು ಎಂಬ ನೀತಿಯನ್ನ ಸರ್ಕಾರ ಅನುಸರಿಸಿತ್ತು. ಆದರೆ, ಇತ್ತೀಚಿಗೆ ವೈದ್ಯಕೀಯ ಸ್ನಾತಕೋತ್ತರ ಹಾಗೂ ಎಂಬಿಬಿಎಸ್ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಿ ಹೊರಬರುತ್ತಿರುವುದರಿಂದ, ಖಾಲಿ ಇರುವ ಹುದ್ದೆಗಳಿಗೆ ಮಾತ್ರ ವೈದ್ಯರ ಕಡ್ಡಾಯ ಒಂದು ವರ್ಷದ ಸೇವೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.


