ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ರೀತಿಯ ಆರೋಪಗಳನ್ನು ಮಾಡುವುದು ಇದೇ ಮೊದಲ ಸಲವೇನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಅವರ ಮಕ್ಕಳ ವಿರುದ್ಧ ಆರೋಪ ಮಾಡಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಬೇಕಾದರೆ ಪಕ್ಷದ ಹೈಕಮಾಂಡಿಗೆ ಎರಡು ಸಾವಿರ ಕೋಟಿ ರೂಪಾಯಿ ಕೊಡಬೇಕಾಗುತ್ತದೆ ಎನ್ನುವ ಗಂಭೀರ ಆರೋಪವನ್ನೂ ಅವರು ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಬಹಿರಂಗವಾಗಿ ತಮ್ಮ ಪಕ್ಷದ ಉನ್ನತ ನಾಯಕರ ವಿರುದ್ಧವೇ ಆರೋಪ ಮಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರ, ಬಾಯಿಬಲದ ಹಿಂದೆ ಇರುವ ಶಕ್ತಿ ಯಾವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಬಿಜೆಪಿಯಲ್ಲಿರುವ ಯಾವ ‘ಜೀ” ಗಳ ಬಲದಿಂದ ಇಂತಹ ಸ್ವಪಕ್ಷೀಯರ ವಿರುದ್ಧ ಇಂತಹ ಮಾನಹಾನಿಕರ ಆರೋಪ ಮಾಡಿಯೂ ಅವರೂ ಬಚಾವಾಗುತ್ತಿದ್ದಾರೆ ಎನ್ನುವುದು ಕೂಡಾ ಬಯಲಾಗಬೇಕಾಗಿದೆ ಎಂದು ಲೇವಡಿ ಮಾಡಿದರು.


