ಔರಾದ: ಸರ್ಕಾರಿ ಪ್ರಥಮ ದರ್ಜೆ ಕಾಲೇಜ ಔರಾದನಲ್ಲಿ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿರುವುದರಿಂದಾಗಿ ವಿದ್ಯಾರ್ಥಿಗಳಿಗೆ ತರಗತಿ ನಡೆಯುತ್ತಿಲ್ಲ, ತಕ್ಷಣವೇ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸುವಂತೆ ವಿದ್ಯಾರ್ಥಿ ಬಂಧುತ್ವ ವೇದಿಕೆ ಪ್ರತಿಭಟನೆ ನಡೆಸಿತು.
ನವೆಂಬರ್ 23ರಿಂದ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಅತಿಥಿ ಶಿಕ್ಷಕರ ಬೇಡಿಕೆ ಈಡೇರಿಸಿ, ಇಲ್ಲವಾದರೆ ಪರೀಕ್ಷೆಗಳನ್ನು ನಡೆಸದೇಯೇ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಬೇಕು ಎಂದು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಸರಕಾರಿ ಪ್ರಥಮ ದರ್ಜೆ ಕಾಲೇಜು ಔರಾದನಲ್ಲಿ ಒಟ್ಟು ಸುಮಾರು 900 ಕ್ಕಿಂತ ಅಧಿಕ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಇಲ್ಲಿ ಓದುವ ಮಕ್ಕಳು ಕೂಲಿ ಕಾರ್ಮಿಕರ, ಬಡವರ, ಮಧ್ಯಮ ವರ್ಗದ ಕುಟುಂಬದ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಇಲ್ಲಿ ಖಾಯಂ ಪ್ರಾಧ್ಯಾಪಕರು ಕೇವಲ 8 ಜನರಿದ್ದಾರೆ ಅತಿಥಿ ಉಪನ್ಯಾಸಕರು ಸುಮಾರು 34 ಕ್ಕಿಂತಲು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸುವುದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗುತ್ತಿದೆ. ಪರೀಕ್ಷೆಗಳು ಸಮೀಪಿಸುತ್ತಿವೆ ಹೀಗಾಗಿ ಪಾಠ ಪ್ರವಚನಗಳಿಲ್ಲದೆ ಹಲವಾರು ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ. ಆದರಿಂದ ಕೂಡಲೇ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡುವಂತೆ ವಿದ್ಯಾರ್ಥಿ ಬಂಧುತ್ವ ವೇದಿಕೆ ಒತ್ತಾಯಿಸಿದೆ.
ವರದಿ: ಅರವಿಂದ್ ಮಲ್ಲಿಗೆ


