ಕೊಪ್ಪಳ: ದಾವಣಗೆರೆಯಲ್ಲಿ ನಡೆಯಲಿರುವ ವೀರಶೈವ ಸಮಾವೇಶದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ, ಈ ಕುರಿತು ಶಾಮನೂರು ಶಿವಶಂಕರಪ್ಪ ಹಾಗೂ ಸಚಿವ ಈಶ್ವರ ಖಂಡ್ರೆ ಅವರನ್ನು ಕೇಳಬೇಕು ಎಂದು ಸಚಿವ ಎಂ.ಬಿ. ಪಾಟೀಲ್ ಸಿಡಿಮಿಡಿಗೊಂಡಿದ್ದು, ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.
ತಾವರಗೇರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾವೇಶದಲ್ಲಿ ಭಾಗವಹಿಸುವ ಬಗ್ಗೆ ವಿಚಾರ ಮಾಡುತ್ತೇನೆ. ಸಮಾವೇಶದ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಸಮಾವೇಶದ ಬಗ್ಗೆ ಶಾಮನೂರು ಶಿವಶಂಕರಪ್ಪ ಹಾಗೂ ಸಚಿವ ಈಶ್ವರ ಖಂಡ್ರೆ ಅವರನ್ನು ಕೇಳಬೇಕು ಎಂದಿದ್ದಾರೆ.
ಲೋಕಸಭೆಯಲ್ಲಿ ಸಂಸದರ ಅಮಾನತು ಮಾಡಿದ ವಿಚಾರವಾಗಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸದನದಲ್ಲಿ ಸಂವಿಧಾನಾತ್ಮಕವಾಗಿ ಪ್ರತಿಭಟನೆ ನಡೆಸಲಾಗುತ್ತದೆ. ಅದಕ್ಕಾಗಿ ಸಂಸದರನ್ನು ಅಮಾನತು ಮಾಡಿದ್ದು ಸರಿಯಾದ ಕ್ರಮವಲ್ಲ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಸಂಸದರನ್ನು ಅಮಾನತು ಮಾಡಲಾಗಿದೆ. ಅಮಾನತು ಮಾಡುವುದರಲ್ಲೂ ಇತಿಹಾಸ ಸೃಷ್ಟಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.


