ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿ ಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು ಇದು ಅಪ್ಪಟ ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದ್ದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, 2017ರಲ್ಲಿ ದಾಖಲಾಗಿದ್ದ ಪ್ರಕರಣದ ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ನ್ಯಾಯಾಲಯದ ಸಮನ್ಸ್ ಜಾರಿ ಆಗಿದೆ ಅಷ್ಟೆ.
2017 ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023 ರ ಸೆಪ್ಟೆಂಬರ್ 7 ರಂದು ಸರ್ಕಾರ ಅನುಮತಿ ನೀಡಿತ್ತು.
2023ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಈ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದ್ದು ಜನವರಿ 8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿಯಾಗಿದೆ. ಇದಿಷ್ಟೂ ಕೂಡ ಯಾವುದೇ ಒಂದು ಪ್ರಕರಣದಲ್ಲಿ ಸಹಜವಾಗಿ ನಡೆಯುವ ಕಾನೂನು ಪ್ರಕ್ರಿಯೆಯಾಗಿದೆ. ಆದ್ದರಿಂದ ಪ್ರಕರಣದ ಮರು ತನಿಖೆಗೆ ಸರ್ಕಾರ ಮುಂದಾಗಿದೆ ಎನ್ನುವುದು ತಪ್ಪು ಮತ್ತು ದುರುದ್ದೇಶಪೂರಿತ ಸುಳ್ಳು ಸಂಗತಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.


