ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಹಿಸಾರ್ ಮೂಲದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಮತ್ತು ಹರಿಯಾಣ ಉಪ ಪೊಲೀಸ್ ವರಿಷ್ಠಾಧಿಕಾರಿ ಜೋಗಿಂದರ್ ಶರ್ಮಾ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಮೃತ ಪವನ್ ಅವರ ತಾಯಿ ಸಲ್ಲಿಸಿದ್ದ ಪ್ರಕರಣದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜೋಗಿಂದರ್ ಮೊದಲ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಸದಸ್ಯರಾಗಿದ್ದರು.
ಹಿಸಾರ್ ಮೂಲದ ಪವನ್ ಜನವರಿ 1 ರಂದು ಆಸ್ತಿ ವಿವಾದದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮರಣೋತ್ತರ ಪರೀಕ್ಷೆಯ ನಂತರ ಪವನ್ ಕುಟುಂಬವು ಮೃತ ದೇಹವನ್ನು ಸ್ವೀಕರಿಸಲು ಸಿದ್ಧರಿರಲಿಲ್ಲ. ಆರೋಪಿಗಳನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಕಾಯ್ದೆಯಡಿ ಬಂಧಿಸಬೇಕು ಎಂದು ಆಗ್ರಹಿಸಿ ಶವ ಸ್ವೀಕರಿಸಲು ಕುಟುಂಬ ನಿರಾಕರಿಸಿದೆ.
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಆರೋಪಿಗಳು ಮೃತ ಪವನ್ ನನ್ನು ಮನೆ ಖಾಲಿ ಮಾಡುವಂತೆ ಹೇಳಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಜಯ್ಬೀರ್, ಈಶ್ವರ್ ಜಜಾರಿಯಾ, ಪ್ರೇಮ್ ಖತಿ, ಅರ್ಜುನ್ ಮತ್ತು ಹಾಕಿ ಕೋಚ್ ರಾಜೇಂದ್ರ ಸಿಹಾಗ್ ಪ್ರಕರಣದ ಇತರ ಆರೋಪಿಗಳು. ಆರೋಪಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಹೊರಿಸಲಾಗಿದೆ.


