ಹುಬ್ಬಳ್ಳಿ: 28 ವರ್ಷದ ಯುವಕನನ್ನು ಕಾಂಗ್ರೆಸ್ ಕಚೇರಿ ಮುಂದೆ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂದೆ 28 ವರ್ಷದ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಮೃತದೇಹ ಅರೆಬರೆ ಬೆಂದ ಸ್ಥಿತಿಯಲ್ಲಿ ಪತ್ತೆಯಾಗಿದೆ. ರಾತ್ರಿ ಸ್ನೇಹಿತರೆಲ್ಲ ಪಾರ್ಟಿ ಮಾಡಿ ನಂತರ ಭೀಕರವಾಗಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಮೃತ ಯುವಕನ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಹಳೇ ಹುಬ್ಬಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.
ಕೊಲೆಗೆ ಅನೈತಿಕ ಸಂಬಂಧ ಕಾರಣ ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ. ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


