ಉತ್ತರ ಪ್ರದೇಶದಲ್ಲಿ ಪಟಾಕಿ ಸಿಡಿಸುವ ವೇಳೆ ಭಾರೀ ಅವಘಡ. ಚಿತ್ರಕೂಟದಲ್ಲಿ ಬುಂದೇಲ್ ಖಂಡ್ ಗೌರವ್ ಮಹೋತ್ಸವದ ವೇಳೆ ನಡೆದ ಸ್ಫೋಟದಲ್ಲಿ 4 ಮಕ್ಕಳು ಸಾವನ್ನಪ್ಪಿದ್ದಾರೆ. ಅನೇಕ ಜನರು ಗಾಯಗೊಂಡರು. ಹಬ್ಬದ ನಿಮಿತ್ತ ಪಟಾಕಿ ಸಿಡಿಸುವ ವೇಳೆ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ಬೆಳಗ್ಗೆ ಈ ಘಟನೆ ನಡೆದಿದೆ. ವಿಧಿವಿಜ್ಞಾನ ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್) ತಂಡವು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೂವರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪ್ರಯಾಗರಾಜ್ ವಲಯದ ಹೆಚ್ಚುವರಿ ಮಹಾನಿರ್ದೇಶಕ ಭಾನು ಭಾಸ್ಕರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದ ತನಿಖೆಗಾಗಿ ಹೆಚ್ಚುವರಿ ಮಹಾನಿರ್ದೇಶಕರ ಶ್ರೇಣಿಯ ಅಧಿಕಾರಿಯ ನೇತೃತ್ವದ ಉನ್ನತ ಮಟ್ಟದ ತನಿಖಾ ಸಮಿತಿಗೆ ಆದೇಶಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ.


