ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಲಾರಿ ಹಾಗೂ ಟಿಟಿ ವಾಹನ ನಡುವೆ ಭೀಕರ ಅಪಘಾತದಿಂದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಡರಾತ್ರಿ ನಡೆದಿದೆ. ಮೃತರನ್ನು ಸೋಮಲಿಂಗಪ್ಪ (70), ಶಿವಲಿಂಗಪ್ಪ (66), ರಾಜೇಶ್ವರಿ ಎಂದು ಗುರುತಿಸಲಾಗಿದೆ.
ಟಿಟಿಯಲ್ಲಿದ್ದವರು ಮದುವೆ ಸಮಾರಂಭ ಮುಗಿಸಿಕೊಂಡು ವಾಪಸ್ ತೆರಳುತ್ತಿದ್ದರು ಎನ್ನಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಟಿಟಿ ವಾಹನ ಹೋಗುತ್ತಿತ್ತು. ಕುಟುಂಬ ಸಮೇತ ವಾಪಸ್ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಟಿಟಿ ವಾಹನ ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದೆ. ಇದರ ಪರಿಣಾಮ ಟಿಟಿ ವಾಹನ ಸಂಪೂರ್ಣ ಜಖಂಗೊಂಡಿದೆ.
ಟಿಟಿ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


