ರಾಮನಗರ: ರಾಜ್ಯಸಭಾ ಚುನಾವಣಾ ಫಲಿತಾಂಶದ ಸಂದರ್ಭದಲ್ಲಿ ವಿಧಾನಸೌಧದಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಲಾಗಿದೆ ಎಂದು ಆರೋಪಿಸಿ, ಬಿಜೆಪಿ- ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಬುಧವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ನಗರದ ಐಜೂರು ವೃತ್ತದಲ್ಲಿ ಬೆಳಿಗ್ಗೆ ಜಮಾಯಿಸಿದ ಎರಡೂ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು, ಬೆಂಗಳೂರು-ಮೈಸೂರು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು. ನೂತನ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್, ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಧಿಕ್ಕಾರ ಕೂಗಿದರು.
ಈ ವೇಳೆ ಮಾತನಾಡಿದ ಬಿಜೆಪಿ ನಗರ ಮಂಡಲ ಅಧ್ಯಕ್ಷ ದರ್ಶನ್, ‘ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ತಮ್ಮನ್ನು ಪ್ರಶ್ನಿಸಲು ಬಂದ ಮಾಧ್ಯಮದವರನ್ನು ನಿಂದಿಸಿರುವುದು ತಪ್ಪು. ಅವರು ಮಾಧ್ಯಮದವರನ್ನು ಕ್ಷಮೆ ಕೋರಬೇಕು’ ಎಂದು ಒತ್ತಾಯಿಸಿದರು.
ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ್, ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ ಎಂಬುದಕ್ಕೆ ಇದು ಸಾಕ್ಷಿ. ಘೋಷಣೆ ಕೂಗಿದವನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


