ಗುರುನಾನಕ ದೇವ ಇಂಜಿಯರಿಂಗ್ ಕಾಲೇಜಿನಲ್ಲಿ ʼಜೈಶ್ರೀರಾಮʼ ಗೀತೆ ಹಾಕಿ ನೃತ್ಯ ಮಾಡುವ ವೇಳೆ ಎರಡು ಕೋಮಿನ ವಿದ್ಯಾರ್ಥಿಗಳ ಮಧ್ಯೆ ಗಲಾಟೆ ನಡೆದಿದ್ದು, ಈ ಕುರಿತು ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ 25 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದೆ.
ಘಟನೆಯ ವಿವರ:
ಬುಧವಾರ ಮಧ್ಯಾಹ್ನ ಗುರುನಾನಕ ದೇವ ಇಂಜಿಯರಿಂಗ್ ಕಾಲೇಜಿನಲ್ಲಿ ಮೇ 30, 31 ರಂದು ಎರಡು ದಿನಗಳ ಕಾಲ ನಡೆಯುವ ತಾಂತ್ರಿಕ ವಾರ್ಷಿಕೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ ನಿಮಿತ್ತ ಪೂರ್ವಭಾವಿ ತಯಾರಿ ನಡೆಯುತ್ತಿತ್ತು. ಈ ವೇಳೆ ಕೇಲವು ವಿದ್ಯಾರ್ಥಿಗಳು ʼಜೈಶ್ರೀರಾಮʼ ಹಾಡು ಹಾಕಿ ನೃತ್ಯ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಇನ್ನೊಂದು ಕೋಮಿನ ವಿದ್ಯಾರ್ಥಿಗಳು ಅಡ್ಡಿ ಪಡಿಸಿದರು ಎನ್ನಲಾಗಿದೆ. ಈ ವೇಳೆ ಎರಡು ಕೋಮಿನ ವಿದ್ಯಾರ್ಥಿಗಳ ನಡುವೆ ವಾಗ್ವಾದ ತಾರಕಕ್ಕೇರಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ವಿಷಯ ತಿಳಿದು ಸ್ಥಳಕ್ಕೆ ಗಾಂಧಿಗಂಜ್ ಪೊಲೀಸ್ ಠಾಣೆಯ ಪೋಲಿಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಮುಂಜಾಗೃತಾ ಕ್ರಮವಾಗಿ ಎರಡು ಗುಂಪಿನವರ ಮೇಲೆ ಸಿಆರ್ ಪಿಸಿ ಕಲಂಗಳ ಅಡಿ ಪ್ರಕರಣ ದಾಖಲಾಗಿದೆ.
ಕಾಲೇಜಿನಲ್ಲಿ ನಾಳೆ ನಡೆಯಬೇಕಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಡಳಿತ ಮಂಡಳಿ ರದ್ದುಗೊಳಿಸಿದೆ ಎಂದು ತಿಳಿದು ಬಂದಿದ್ದು, ಕಾಲೇಜಿನ ಬಳಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


