ತುಮಕೂರು: ರೈತರು ತಾವು ಬೆಳೆದ ಬೆಳೆಗಳ ವಿವರವನ್ನು ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆಗೆ ದಾಖಲಿಸಿ ಸರ್ಕಾರಿ ಸೌಲಭ್ಯಗಳನ್ನು ಪಡೆಯಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದರು.
ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ಗೋಡೆಕೆರೆ ಗ್ರಾಮದ ರೈತರ ಜಮೀನುಗಳಿಗಿಂದು ಭೇಟಿ ನೀಡಿ ರೈತರೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದ ಅವರು, ಬೆಳೆ ವಿಮೆ, ಬೆಳೆ ಪರಿಹಾರ, ಬೆಳೆ ಸಾಲ, ಬೆಂಬಲ ಬೆಲೆ ಖರೀದಿ ಮತ್ತಿತರ ಕೃಷಿ ಇಲಾಖೆಯ ಸವಲತ್ತು ವಿತರಣೆಗೆ ಬೆಳೆ ಸಮೀಕ್ಷೆ ಅತೀ ಮುಖ್ಯ. ರೈತರೇ ಸ್ವತಃ ಮೊಬೈಲ್ ಆ್ಯಪ್ ಮೂಲಕ ತಮ್ಮ ಜಮೀನಿನ ಬೆಳೆ ವಿವರಗಳನ್ನು ತಂತ್ರಾಂಶದಲ್ಲಿ ಅಪ್ ಲೋಡ್ ಮಾಡುವುದರಿಂದ ನ್ಯೂನ್ಯತೆಗಳನ್ನು ಕಡಿಮೆ ಮಾಡಬಹುದು ಎಂದು ತಿಳಿಸಿದರು.
ಬೆಳೆ ಸಮೀಕ್ಷೆಯಲ್ಲಿ ಸಂಗ್ರಹಿಸಲಾದ ಮಾಹಿತಿಯನ್ನು ಗ್ರಾಮಗಳಿಗೆ ನಿಯೋಜಿಸಿರುವ ವಿವಿಧ ಇಲಾಖೆಗಳ ಮೇಲ್ವಿಚಾರಣಾ ಅಧಿಕಾರಿಗಳು ಪರಿಶೀಲಿಸಿ ಅನುಮೋದಿಸುತ್ತಾರೆ. ರೈತರು ಬೆಳೆ ಸಮೀಕ್ಷೆಯಲ್ಲಿ ಸಂಗ್ರಹಿಸಲಾದ ತಮ್ಮ ಜಮೀನಿನ ಬೆಳೆ ವಿವರದ ಮಾಹಿತಿ ಬೇಕಿದ್ದಲ್ಲಿ ಬೆಳೆ ದರ್ಶಕ ಮೊಬೈಲ್ ಆ್ಯಪ್ ಬಳಸಿ ವೀಕ್ಷಿಸಬಹುದಾಗಿದೆ. ಬೆಳೆ ದರ್ಶಕ ಆ್ಯಪ್‌ನಲ್ಲಿ ಮಾಹಿತಿ ವ್ಯತ್ಯಾಸಗಳಿದ್ದಲ್ಲಿ ರೈತರು ಮನವಿ ಮಾಡಿ ತಪ್ಪುಗಳನ್ನು ಸರಿಪಡಿಸಿಕೊಳ್ಳಬಹುದಾಗಿದೆ. ಬೆಳೆ ಸಮೀಕ್ಷೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಸಹಾಯವಾಣಿ ಸಂಖ್ಯೆ: ೧೮೦೦ ೪೨೫ ೩೫೫೩ನ್ನು ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ತಿಳಿಸಿದರು.
ನಂತರ ಚಿಕ್ಕನಾಯಕನಹಳ್ಳಿ ಹಿಂದುಳಿದ ವರ್ಗಗಳ ಸರ್ಕಾರಿ ಬಾಲಕಿಯರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ನಿಲಯ ಅಡುಗೆ ಕೋಣೆ, ವಿದ್ಯಾರ್ಥಿಗಳ ಕೊಠಡಿ, ಭೋಜನಾಲಯವನ್ನು ಪರಿಶೀಲಿಸಿದರು. ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಾಗಿರುವುದರಿಂದ ಹೆಚ್ಚುವರಿಯಾಗಿ ಕೊಠಡಿಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅವರಿಗೆ ಸೂಚನೆ ನೀಡಿದರು.
ಇದಕ್ಕೂ ಮುನ್ನ ತಿಪಟೂರು ತಾಲ್ಲೂಕಿನ ವಿವಿಧ ಗ್ರಾಮಗಳ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಸಮೀಕ್ಷೆ ಕೈಗೊಳ್ಳುವ ಕಾರ್ಯ ವಿಧಾನವನ್ನು ಪರಿಶೀಲಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA