ಬೆಂಗಳೂರು: ಕೆನಡಾದ ಕೃಷಿ ಉತ್ಪನ್ನ ತಯಾರಿಕಾ ಪ್ರಮುಖ ಕಂಪನಿಯಾಗಿರುವ ವಿಟೆರಾ ವಿಜಯಪುರ ಜಿಲ್ಲೆಯಲ್ಲಿ ಕೃಷಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು 250 ಕೋಟಿ ರೂ. ಮೊತ್ತದ ಬಂಡವಾಳ ಹೂಡಲಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ವಿಟೆರಾ ಕಂಪನಿಯ ಪ್ರತಿನಿಧಿಗಳ ಜತೆ ಸಚಿವರು ಇಲ್ಲಿನ ಖನಿಜ ಭವನದಲ್ಲಿ ನಡೆಸಿದ ಸಭೆಯಲ್ಲಿ ಈ ಬಂಡವಾಳ ಹೂಡಿಕೆ ನಿರ್ಧಾರ ಕೈಗೊಳ್ಳಲಾಗಿದೆ.
ವಿಜಯಪುರ ಜಿಲ್ಲೆಯ ಕೃಷಿ ಸಮುದಾಯದ ಬಳಕೆಗೆ ಅತ್ಯಾಧುನಿಕ ಶೈತ್ಯಾಗಾರಗಳನ್ನು ನಿರ್ಮಿಸಿ ರೈತರು ಸುಗ್ಗಿಯ ನಂತರ ಎದುರಿಸುವ ನಷ್ಟ ತಗ್ಗಿಸಲು ಮತ್ತು ಕೃಷಿ ಉತ್ಪನ್ನಗಳ ಉತ್ಪಾದನೆ, ಪೂರೈಕೆ ಹಾಗೂ ಮಾರಾಟ ಪ್ರಕ್ರಿಯೆಯಲ್ಲಿ ದಕ್ಷತೆ ತರಲು ವಿಟೆರಾ ನೆರವಾಗಲಿದೆ. ವಿಟೆರಾ ಕಂಪನಿಯು ಸುಧಾರಿತ ಉತ್ಪಾದನಾ ತಂತ್ರಜ್ಞಾನ ಬಳಸಲಿದೆ. ರಾಜ್ಯದಲ್ಲಿ ಕೆನಡಾದ ಆಧುನಿಕ ಕೃಷಿ ತಂತ್ರಜ್ಞಾನ ಬಳಕೆ ಹಾಗೂ ಈ ಬಂಡವಾಳ ಹೂಡಿಕೆಯಿಂದ ಕೃಷಿ ಕ್ಷೇತ್ರದ ಉತ್ಪಾದನೆ ಹೆಚ್ಚಲಿದ್ದು, ಅದರಿಂದ ರಾಜ್ಯದ ಒಟ್ಟಾರೆ ಆರ್ಥಿಕತೆಗೂ ಉತ್ತೇಜನ ದೊರೆಯಲಿದೆ ಎಂದೂ ಸಚಿವರು ಹೇಳಿದ್ದಾರೆ.
ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ ಹಾಗೂ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q