ತುಮಕೂರು: ಗೌರವಾನ್ವಿತ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಅಕ್ಟೋಬರ್ 18, 19 ಹಾಗೂ 20ರಂದು 3 ದಿನಗಳ ಕಾಲ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಉಪ ಲೋಕಾಯುಕ್ತರು ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಅಕ್ಟೋಬರ್ 18ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ1:30 ಹಾಗೂ ಮಧ್ಯಾಹ್ನ 2:30 ರಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕ ಕುಂದು ಕೊರತೆಗಳ ವಿಚಾರಣೆ/ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ ಹಾಗೂ ನಂತರ 5:30 ರಿಂದ 6:30 ಗಂಟೆಯವರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಲೋಕಾಯುಕ್ತ ಕಾಯ್ದೆಗೆ ಸಂಬಂಧಿಸಿದಂತೆ ಏರ್ಪಡಿಸಿರುವ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮರು ದಿನ ಅಕ್ಟೋಬರ್ 19ರಂದು ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಬೆಳಿಗ್ಗೆ 9:45 ರಿಂದ 10:45ರವರೆಗೆ ಜಿಲ್ಲೆಯ ವಕೀಲರೊಂದಿಗೆ ಸಂವಾದ ಸಭೆ, ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1:30 ಹಾಗೂ ಮಧ್ಯಾಹ್ನ 2:30 ರಿಂದ ಸಂಜೆ 5 ಗಂಟೆಯವರೆಗೆ, ಅಕ್ಟೋಬರ್ 18ರಂದು ಸಾರ್ವಜನಿಕರಿಂದ ಸ್ವೀಕೃತವಾದ ಅರ್ಜಿ/ ಕುಂದು ಕೊರತೆಗಳ ವಿಲೇವಾರಿ ಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ. ನಂತರ ಲೋಕಾಯುಕ್ತ ಕಚೇರಿಯಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಬಾಕಿ ಇರುವ ದೂರು ಪ್ರಕರಣಗಳ ಕುರಿತು ವಿಚಾರಣೆ ನಡೆಸಲಿದ್ದಾರೆ.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಅಕ್ಟೋಬರ್ 20ರಂದು ಬೆಳಿಗ್ಗೆ 9 ರಿಂದ 11 ಗಂಟೆಯವರೆಗೆ ಜಿಲ್ಲೆಯ ನ್ಯಾಯಾಂಗ ಅಧಿಕಾರಿ ಹಾಗೂ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಉಪ ಲೋಕಾಯುಕ್ತರು ನಡೆಸಲಿರುವ ಸಾರ್ವಜನಿಕ ಕುಂದು ಕೊರತೆ ಸಭೆಯಲ್ಲಿ ಸಾರ್ವಜನಿಕರು ಪಾಲ್ಗೊಂಡು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q