ತುಮಕೂರು: ಪ್ರೀತಿ, ಪ್ರೇಮದ ಹೆಸರಿನಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ ಜಿಲ್ಲಾ ಅಧಿಕ ಸತ್ರ ನ್ಯಾಯಾಲಯ (FTSC POCSO) 20 ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷದ 30 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಹರೀಶ್(31) ಎಂಬಾತ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ. ಈತ ನೊಂದ ಬಾಲಕಿಯ ಸಂಬಂಧಿಯಾಗಿದ್ದಾನೆ. ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಕೂಡ 14 ವರ್ಷದ ಬಾಲಕಿಯನ್ನು ಪ್ರೀತಿ, ಪ್ರೇಮ ಎಂದು ಪುಸಲಾಯಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳಂಬೆಳ್ಳ ಪೊಲೀಸ್ ಠಾಣಾ ಅಧಿಕಾರಿ ರವಿಕುಮಾರ್ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.
ಈ ಪ್ರಕರಣವನ್ನು ಕೋರ್ಟ್ ವಿಚಾರಣೆ ನಡೆಸಿದ ವೇಳೆ, ಪತ್ನಿ ಇದ್ದು ಇಬ್ಬರು ಮಕ್ಕಳಿರುವ ಅಪರಾಧಿ ಬಾಲಕಿಗೆ ಸಂಬಂಧಿಯಾಗಿರುವ ಹಿನ್ನೆಲೆ ರಾಜಿ ಪಂಚಾತಿಕೆ ಮಾಡಿಸಿಕೊಂಡು ನೊಂದ ಬಾಲಕಿಯನ್ನು ಅಪರಾಧಿಗೆ ಎರಡನೇ ಮದುವೆ ಮಾಡಿಕೊಡುವುದಾಗಿ ತಿಳಿಸಿದ್ದಾರೆ. ವಿಚಾರಣೆ ನಡೆಸಲಾದ ಸಾಕ್ಷಿಯಿಂದ ಆರೋಪಿಯ ಅಪರಾಧ ಸಾಬೀತಾದ ಹಿನ್ನೆಲೆ ಅಪರಾಧಿಗೆ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ಮತ್ತು 1.30 ಲಕ್ಷ ದಂಡವನ್ನು ವಿಧಿಸಿದ್ದು, ದಂಡದ ಮೊತ್ತದಲ್ಲಿ ನೊಂದ ಬಾಲಕಿಗೆ 1.25 ಲಕ್ಷ ರೂಪಾಯಿ ಪರಿಹಾರವಾಗಿ ನೀಡಬೇಕು ಎಂದು ಆದೇಶ ನೀಡಿದೆ.
ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್. ಅವರು ವಾದ ಮಂಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296