ತುಮಕೂರು: ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಡಾ.ಶಿವಕುಮಾರ ಸ್ವಾಮಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾಗವಹಿಸಿ, ಗದ್ದುಗೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು. ಇದೇ ವೇಳೆ ಶ್ರೀಮಠದ ದಾಸೋಹ ನಿಲಯದಲ್ಲಿ ಮಕ್ಕಳಿಗೆ ಪ್ರಸಾದ ಬಡಿಸುವ ಮೂಲಕ ದಾಸೋಹ ದಿವಸಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿ, ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಸಂಸದ ಬಸವರಾಜ, ಶಾಸಕ ಜ್ಯೋತಿ ಗಣೇಶ್ , ಮಾಜಿ ಶಾಸಕ ಸುರೇಶ್ ಗೌಡ ಉಪಸ್ಥಿತರಿದ್ದರು.
ಕೊವಿಡ್ ಹಿನ್ನೆಲೆಯಲ್ಲಿ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಗದ್ದುಗೆ ಪೂಜೆ ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮಗಳು ಇರುವುದಿಲ್ಲ. ಉತ್ಸವ, ಮೆರವಣಿಗೆ, ವೇದಿಕೆ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಕಾರ್ಯಕ್ರಮ ಮಾಡಿದರೆ ಮಠದ ವಿದ್ಯಾರ್ಥಿಗಳು, ಭಕ್ತಾದಿಗಳು ಸೇರುತ್ತಾರೆ. ಇದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ. ಹಾಗಾಗಿ, ಎಲ್ಲಾ ರೀತಿಯ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಮಠದ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.