ಮೈಸೂರು: ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ ಅಗೌರವ ತೋರಿದ ರಾಯಚೂರು ಜಿಲ್ಲೆ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಲು ಒತ್ತಾಯಿಸಿ, ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಮೈಸೂರು ವಿಶ್ವ ವಿದ್ಯಾಲಯದ ಸಂಶೋಧಕ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ನಗರದ ಮಾನಸಗಂಗೋತ್ರಿಯಲ್ಲಿರುವ ಶತಮಾನೋತ್ಸವ ಗಡಿಯಾರ ಆವರಣದಲ್ಲಿ ಸಮಾವೇಶಗೊಂಡ ವಿದ್ಯಾರ್ಥಿಗಳು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅಗೌರವ ತೋರಿರುವುದು ಖಂಡನೀಯ. ಅವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಮತ್ತು ಸೇವೆಯಿಂದ ವಜಾಗೊಳಿಸಬೇಕು ಎಂದು ಘೋಷಣೆ ಕೂಗಿದರು.
ವಿವಿ ಸಂಶೋಧಕರ ಸಂಘದ ರಾಜ್ಯಾಧ್ಯಕ್ಷ ಎಸ್.ಮರಿದೇವಯ್ಯ ಮಾತನಾಡಿ, ನ್ಯಾ ಮಲ್ಲಿಕಾರ್ಜುನ ಗೌಡ ಸಂವಿಧಾನ ವಿರೋಧಿ ಕೃತ್ಯ ಎಸಗಿದ್ದಾರೆ. ಅಂಬೇಡ್ಕರ್ ರವರ ಭಾವಚಿತ್ರವಿದ್ದಲ್ಲಿ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಹೇಳುವ ಮೂಲಕ ಉದ್ಥಟತನದಿಂದ ವರ್ತಿಸಿದ್ದಾನೆ ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಹೋರಾಟ ನಿರತ ಸಂಶೋಧನಾ ವಿದ್ಯಾರ್ಥಿಗಳ ಮೇಲೆ ಎಬಿವಿಪಿ ಕಾರ್ಯಕರ್ತರು ದಾಳಿ ಮಾಡಿ ಹೋರಾಟ ಹತ್ತಿಕ್ಕಲು ಹುನ್ನಾರ ಮಾಡಿರುವುದು ಖಂಡನೀಯ. ಪ್ರತಿಭಟನೆ ಹತ್ತಿಕ್ಕುವುದು ಪ್ರಜಾಪ್ರಭುತ್ವದ ಕತ್ತು ಹಿಸುಕಿದಂತೆ ಎಬಿವಿಪಿ ಕಾರ್ಯಕರ್ತರ ಮೇಲೆ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ರಕ್ಷಣೆ ನೀಡಬೇಕೆಂದು ಇದೇ ವೇಳೆ ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ಮುಖಂಡರು ಮಹೇಶ್ ಸೋಸಲೇ, ನಂಜುಂಡಸ್ವಾಮಿ, ಹೂವಿನ ಸಿದ್ದು, ಕಿರಣ್ ಕರುಣಾ, ಸರಸ್ವತಿ, ದೀಪು, ಪ್ರವೀಣ್, ಅಭಿಷೇಕ್ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB