ತುಮಕೂರು: ಕುಣಿಗಲ್ ತಾಲ್ಲೂಕು ದೊಡ್ಡ ಮಳಲವಾಡಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಕಳೆದ ಮೂರು ತಿಂಗಳಿಂದ ನೀರಿಗೆ ಸಮಸ್ಯೆಯುಂಟಾಗಿದ್ದು, ಕೂಡಲೇ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಹಶೀಲ್ದಾರ್ ಯು. ರಶ್ಮಿ ಅವರಿಗೆ ಸೂಚನೆ ನೀಡಿದರು.
ಕುಣಿಗಲ್ ಶಾಸಕ ಡಾ.ರಂಗನಾಥ ಅವರ ಸೂಚನೆ ಮೇರೆಗೆ ಶುಕ್ರವಾರ ಬೆಳಿಗ್ಗೆ ಗ್ರಾಮಕ್ಕೆ ಭೇಟಿ ನೀಡಿ ಸ್ಥಳೀಯರಿಂದ ನೀರಿನ ಸಮಸ್ಯೆ ಬಗ್ಗೆ ಮಾಹಿತಿ ಪಡೆದ ಅವರು, ಪಕ್ಕದ ಗ್ರಾಮದ ಕೊಳವೆ ಬಾವಿಯಿಂದ ಪೈಪ್ ಲೈನ್ ಮೂಲಕ ನೀರೊದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಮಸ್ಯೆ ತಿಳಿದ ಕೂಡಲೇ ಗ್ರಾಮಕ್ಕೆ ಭೇಟಿ ನೀಡಿ ಪರಿಹಾರ ಕಾರ್ಯ ಕೈಗೊಂಡ ಜಿಲ್ಲಾಧಿಕಾರಿಗಳ ಕ್ರಮಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.
ನಂತರ ಕುಣಿಗಲ್ ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿ ತೆರೆಯಲಾಗಿರುವ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ತೂಕ ಮತ್ತು ಅಳತೆ ಪ್ರಕ್ರಿಯೆಯನ್ನು ಪರಿಶೀಲಿಸಿ ರೈತರಿಂದ ಅಹವಾಲುಗಳನ್ನು ಆಲಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೀರಿನ ಸಮಸ್ಯೆಯನ್ನು ಪರಿಶೀಲಿಸಿ ಪರಿಹಾರ ಕ್ರಮಕೈಗೊಳ್ಳಲು ದೊಡ್ಡ ಮಳಲವಾಡಿ ಗೊಲ್ಲರಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಈಗಾಗಲೇ ಪಕ್ಕದ ಗ್ರಾಮದಿಂದ ದೊಡ್ಡ ಮಳಲವಾಡಿ ಗೊಲ್ಲರಹಟ್ಟಿ ಗ್ರಾಮಕ್ಕೆ ನೀರೊದಗಿಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಗ್ರಾಮದಲ್ಲಿ ತಲೆದೋರಿರುವ ನೀರಿನ ಸಮಸ್ಯೆಯನ್ನು ಕೂಡಲೇ ಬಗೆಹರಿಸಲು ಈಗಾಗಲೇ ಸ್ಥಳೀಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈಮಲ್ಯ ವಿಭಾಗದ ಇಂಜಿನಿಯರ್ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಗ್ರಾಮದಲ್ಲಿರುವ 40 ಮನೆಗಳಿಗೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ. ಗ್ರಾಮ ಮಟ್ಟದ ಅಧಿಕಾರಿಗಳು ಸ್ಥಳೀಯವಾಗಿ ತಲೆದೋರುವ ನೀರಿನ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಬೇಕು. ಇದರಿಂದ ತಹಶೀಲ್ದಾರರು, ಜಿಲ್ಲಾಡಳಿತಕ್ಕೆ ಬರುವ ದೂರುಗಳನ್ನು ತಪ್ಪಿಸಬಹುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಲ್ಲಿ 15ನೇ ಹಣಕಾಸು ನಿಧಿ, ಜಲ್ ಜೀವನ್ ಮಿಷನ್ ಯೋಜನೆ, ಗ್ರಾಮ ಪಂಚಾಯತಿ ಅನುದಾನದಿಂದ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು, ಅಧಿಕಾರಿಗಳು ತ್ವರಿತವಾಗಿ ಕ್ರಮಕೈಗೊಳ್ಳಬೇಕೆಂದು ಸೂಚಿಸಲಾಗಿದೆ. ಜನರಿಗೆ ಕುಡಿಯುವ ನೀರಿಗೆ ಯಾವ ರೀತಿಯಲ್ಲೂ ಸಮಸ್ಯೆ ಉಂಟಾಗಬಾರದು. ಸಮಸ್ಯೆ ತಲೆದೋರಿದಾಗ ತಕ್ಷಣ ಸ್ಪಂದಿಸಲು ತಾಲ್ಲೂಕುಗಳಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದರು.
ಜಿಲ್ಲೆಯಲ್ಲಿ ಈವರೆಗೂ 12 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಲಾಗಿದೆ. ಕಳೆದ ವರ್ಷ ಜಿಲ್ಲೆಯಲ್ಲಿ 1000 ಮಿ.ಮೀ. ಮಳೆಯಾಗಿರುವುದರಿಂದ ಜಿಲ್ಲೆಯನ್ನು ಬರಪೀಡಿತವೆಂದು ಸರ್ಕಾರದಿಂದ ಘೋಷಣೆ ಮಾಡಿಲ್ಲ. ಕಳೆದ ವರ್ಷ ಸರಾಸರಿಗಿಂತ ಶೇ.65ಕ್ಕಿಂತ ಹೆಚ್ಚಿನ ಮಳೆಯಾಗಿರುವುದರಿಂದ ಅಂತರ್ಜಲ ಮಟ್ಟ ವೃದ್ಧಿಯಾಗಿದೆ.
ಪಾವಗಡದಂತಹ ಗುಡ್ಡಗಾಡು ಪ್ರದೇಶಗಳಲ್ಲಿ ಕೊಳವೆ ಬಾವಿಗಳು ಕೆಟ್ಟು ಹೋಗುತ್ತಿರುವ ಹಾಗೂ ಕೊಳವೆ ಬಾವಿಗಳಲ್ಲಿ ನೀರಿನ ಇಳುವರಿ ಕಡಿಮೆಯಾಗುತ್ತಿರುವ ಬಗ್ಗೆ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ವರದಿಯಾದ ಕೂಡಲೇ ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಬದ್ಧವಾಗಿದೆ ಎಂದು ತಿಳಿಸಿದರಲ್ಲದೆ, ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವುದು ಮೊದಲ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
ರಾಗಿ ಬೆಳೆದ ರೈತರ ಅನುಕೂಲಕ್ಕಾಗಿ ಕುಣಿಗಲ್ ತಾಲ್ಲೂಕಿನಲ್ಲಿ 2 ರಾಗಿ ಖರೀದಿ ಕೇಂದ್ರಗಳನ್ನು ತೆರೆದು ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟಾರೆ 11 ಕಡೆ ರಾಗಿ ಖರೀದಿ ಕೇಂದ್ರ ತೆರೆಯಲಾಗಿದ್ದು, ಸುಮಾರು 56000 ರೈತರು ರಾಗಿ ಮಾರಾಟ ಮಾಡಲು ಖರೀದಿ ಕೇಂದ್ರದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಪ್ರಸಕ್ತ ಸಾಲಿನಲ್ಲಿ 6ಲಕ್ಷ ಕ್ವಿಂಟಾಲ್ ರಾಗಿ ಖರೀದಿಯಾಗುತ್ತದೆ ಎಂಬ ನಿರೀಕ್ಷೆಯಿದ್ದು, ಜೂನ್ ಮಾಹೆವರೆಗೂ ರೈತರಿಂದ ರಾಗಿ ಖರೀದಿಸುವ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.
ಪ್ರತೀ ಖರೀದಿ ಕೇಂದ್ರದಲ್ಲಿ ಯಾವುದೇ ಸಮಸ್ಯೆ ಬಾರದಂತೆ ಹಾಗೂ ರೈತರಿಗೆ ಅನಾನುಕೂಲವಾಗದಂತೆ ನಿಗಾವಹಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಖರೀದಿ ಕೇಂದ್ರದಲ್ಲಿ ಸಮಸ್ಯೆಗಳು ಕಂಡು ಬಂದಿಲ್ಲವೆಂದು ಹೇಳಿದರಲ್ಲದೆ, ಎಪಿಎಂಸಿ ಆವರಣವನ್ನು ಸ್ವಚ್ಛವಾಗಿಡಬೇಕು. ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡುವ ರೈತರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಎಪಿಎಂಸಿ ಕಾರ್ಯದರ್ಶಿ ಉಷಾ ಅವರಿಗೆ ಸೂಚನೆ ನೀಡಿದರು.
ಕೆರೆ ಒತ್ತುವರಿಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸುಮಾರು 2160 ಕೆರೆಗಳಿದ್ದು, ಈ ಪೈಕಿ ಕೆಲವು ಕೆರೆಗಳು ಒತ್ತುವರಿಯಾಗಿರುವ ಬಗ್ಗೆ ಸಮೀಕ್ಷೆಯಲ್ಲಿ ತಿಳಿದು ಬಂದಿದೆ. ಕೆರೆ ಒತ್ತುವರಿ ತೆರವುಗೊಳಿಸಲು ಜಿಲ್ಲಾದ್ಯಂತ ಆಂದೋಲನವನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಜಿಲ್ಲೆಯ ಕುಣಿಗಲ್ ಹಾಗೂ ಗುಬ್ಬಿ ತಾಲ್ಲೂಕಿನಲ್ಲಿ ಈಗಾಗಲೇ ಕೆರೆ ಒತ್ತುವರಿ ತೆರವು ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಜನರೇ ಸ್ವಯಂಪ್ರೇರಿತರಾಗಿ ಕೆರೆ ಒತ್ತುವರಿ ಮಾಡುವುದನ್ನು ನಿಲ್ಲಿಸಬೇಕು. ಈಗಾಗಲೇ ಒತ್ತುವರಿ ಮಾಡಿದ್ದರೆ ತೆರವುಗೊಳಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿನಿರ್ದೇಶಕ ಮಂಟೇಸ್ವಾಮಿ, ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ನಂತರ ಜಿಲ್ಲಾಧಿಕಾರಿಗಳು ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳಿ ಸ್ವಾಮಿಯ ದರ್ಶನ ಪಡೆದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4