ತುಮಕೂರು: ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಕುಡಿಯುವ ನೀರನ್ನು ಪೂರೈಕೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗುರುವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿಯ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಬೇಸಿಗೆಯಿಂದ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ತಲೆದೋರಿರುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಯೋಜನೆಗಳನ್ನು ರೂಪಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಜಲ್ ಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರನ್ನು ಒದಗಿಸುವ ಪೈಪ್‌ಲೈನ್ ಅಳವಡಿಕೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 3 ವಾಟರ್ ಟೆಸ್ಟಿಂಗ್ ಲ್ಯಾಬ್‌ಗಳಿಂದ ಈವರೆಗೆ ಯಾವುದೇ ನೀರು ಪರೀಕ್ಷಾ ವರದಿಗಳು ಸಲ್ಲಿಕೆಯಾಗಿಲ್ಲವೆಂದ ಅಸಮಾಧಾನ ವ್ಯಕ್ತಪಡಿಸಿದರು. ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಹೊಣೆಗಾರಿಕೆ ನಮ್ಮದು. ಈ ನಿಟ್ಟಿನಲ್ಲಿ ನೀರಿನ ಜೈವಿಕ ಹಾಗೂ ರಾಸಾಯನಿಕ ಪರೀಕ್ಷೆ ನಡೆಸಿ ಪ್ರತಿ 15 ದಿನಗಳಿಗೊಮ್ಮೆ ವರದಿ ಸಲ್ಲಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಅವಶ್ಯಕತೆ ಇರುವ ಕಡೆ ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ಸ್ಥಳ ಗುರುತಿಸಿ ಪ್ರಸ್ತಾವನೆ ಸಲ್ಲಿಸಿದಲ್ಲಿ ಜಿಲ್ಲಾ ಪಂಚಾಯತಿಯಿಂದಲೇ ಅನುಮೋದನೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ(ಅಭಿವೃದ್ಧಿ) ಸಂಜೀವಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳು, ವಿವಿಧ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW