ಬೆಂಗಳೂರು: ವಸತಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಆರೋಪಿಸಿದ್ದಾರೆನ್ನಲಾಗಿರುವ ಆಡಿಯೋ ಕ್ಲಿಪ್ ಜೂ.20ರಂದು ವೈರಲ್ ಆಗಿದೆ.
ಆಡಿಯೋ ಕ್ಲಿಪ್ನಲ್ಲಿ, ಶಾಸಕ ಪಾಟೀಲ್ ತಮ್ಮಲ್ಲಿರುವ ಮಾಹಿತಿಯನ್ನು ಬಹಿರಂಗಪಡಿಸಿದರೆ, ಕಾಂಗ್ರೆಸ್ ನೇತೃತ್ವದ ಸರ್ಕಾರದ ಅಡಿಪಾಯವೇ ಅಲುಗಾಡುತ್ತದೆ ಎಂದು ಹೇಳಿದ್ದಾರೆ.
ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದೆ.
ಕಲಬುರಗಿ ಜಿಲ್ಲೆಯ ಆಳಂದ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕ ಪಾಟೀಲ್, ಸಚಿವ ಜಮೀರ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಅವರೊಂದಿಗೆ ಮಾತನಾಡುತ್ತಿರುವುದು ದೂರವಾಣಿ ಸಂಭಾಷಣೆಯ ಆಡಿಯೋ ಕ್ಲಿಪ್ ನಲ್ಲಿ ಕೇಳಿಬರುತ್ತಿದೆ. ಪಾಟೀಲ್ ತಮ್ಮ ಕ್ಷೇತ್ರದೊಳಗಿನ ಹಳ್ಳಿಗಳಲ್ಲಿ ಮನೆ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಲಂಚದ ಬಗ್ಗೆ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು ಕಾರ್ಯದರ್ಶಿಯನ್ನು ಪ್ರಶ್ನಿಸಿದ್ದಾರೆ.
ಲಂಚ ನೀಡಿದವರಿಗೆ ಮಾತ್ರ ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ. ನನ್ನ ಸ್ವಂತ ಸರ್ಕಾರದ ವಿರುದ್ಧ ಈ ದೂರು ನೀಡಲು ನನಗೆ ಬೇಸರವಾಗಿದೆ. ವಿವಿಧ ಗ್ರಾಮಗಳಲ್ಲಿ ಒಟ್ಟು 950 ಮನೆಗಳನ್ನು ಫಲಾನುಭವಿಗಳಿಂದ ಹಣ ಪಡೆದು ಹಂಚಿಕೆ ಮಾಡಲಾಗಿದೆ. ನನ್ನ ಶಿಫಾರಸು ಪತ್ರಗಳನ್ನು ನಿರ್ಲಕ್ಷಿಸಲಾಗುತ್ತಿದೆ. ಬದಲಾಗಿ, ಗ್ರಾಮ ಪಂಚಾಯತ್ ಅಧ್ಯಕ್ಷರು ಸಲ್ಲಿಸಿದ ಪಟ್ಟಿಗೆ ಆದ್ಯತೆ ನೀಡಲಾಗಿದೆ” ಎಂದು ಶಾಸಕ ಪಾಟೀಲ್ ಹೇಳಿದ್ದಾರೆ ಎಂದು ವರದಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW