ಕೊರಟಗೆರೆ: ಆಕಸ್ಮಿಕವಾಗಿ ಮನೆಯೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಬೇಸಾಯಕ್ಕೆ ತಂದಿದ್ದ ಬಿತ್ತನೆ ಬೀಜ ರಸಗೊಬ್ಬರ ಸೇರಿದಂತೆ ದಿನಬಳಕೆ ವಸ್ತುಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾದ ಘಟನೆ ಕ್ಯಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರೈತ ನಾಗರಾಜು ಎಂಬುವರಿಗೆ ಸೇರಿದ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಬಿತ್ತನೆ ಬೀಜ, ರಸಗೊಬ್ಬರ ಬೇಸಾಯಕ್ಕೆ ಸಂಬಂಧಪಟ್ಟ ವಸ್ತುಗಳು ಸುಟ್ಟು ಕರಕಲಾಗಿವೆ.
ಭಾನುವಾರ ಸಂಜೆ 5 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಸಾರ್ವಜನಿಕರು ಬೆಂಕಿ ನಂದಿಸಲು ಪ್ರಯತ್ನ ಪಟ್ಟರಾದರೂ ಪ್ರಯೋಜನವಾಗಲಿಲ್ಲ.
ಘಟನೆ ವೇಳೆ ಯಾರೂ ಮನೆಯಲ್ಲಿ ಇಲ್ಲದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ. ದಿನಬಳಕೆ ಸಾಮಗ್ರಿಗಳು, ಬಟ್ಟೆ ಬರೆ ಸೇರಿದಂತೆ ದಿನಸಿ ಸಾಮಗ್ರಿಗಳು ಸಹ ಬೆಂಕಿಗೆ ಸಿಲುಕಿ ಸುಟ್ಟು ಕರಕಲಾಗಿದೆ.
ಒಂದು ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ನೊಂದ ರೈತನಿಗೆ ಪರಿಹಾರ ನೀಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


