ತುಮಕೂರು: ನಗರದ ಸಮೀಪದಲ್ಲಿರುವ ಮೈದಾಳದ ಕೆರೆಯ ಕಟ್ಟೆಯಲ್ಲಿ ನೀರು ಸೋರಿಕೆಯಾಗುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಮಾತನಾಡಿದ ಅವರು, ನೀರು ಸೋರಿಕೆಯಾಗುತ್ತಿದ್ದ ಸ್ಥಳಕ್ಕೆ ಈಗಾಗಲೇ ಮಣ್ಣನ್ನು ಹಾಕುವ ಕಾರ್ಯ ಪೂರ್ಣಗೊಂಡಿದ್ದು, ನೀರಿನ ಸೋರಿಕೆ ಪ್ರಮಾಣವನ್ನೂ ನಿಯಂತ್ರಿಸಲಾಗಿದೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ಯಾವುದೇ ರೀತಿಯ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಮೈದಾಳ ಕರೆ ಕಟ್ಟೆಯಲ್ಲಿ ನೀರು ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲೇ ಅಧಿಕಾರಿಗಳೊಂದಿಗೆ ಸಂಚರಿಸಿದ ಅವರು, ತಕ್ಷಣವೇ ಪಿಡಿಒ ಹಾಗೂ ಸಂಬಂಧಪಟ್ಟ ತಾಂತ್ರಿಕ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಮಳೆ ಪ್ರಮಾಣ ಹೆಚ್ಚಿರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಬಲಪಡಿಸಬೇಕು. ಕೆರೆ ಹತ್ತಿರ ಇರುವ ಮನೆ, ಶಾಲೆಗಳು ಮತ್ತು ಇತರೆ ಸಾರ್ವಜನಿಕ ಸ್ಥಳಗಳಿಗೆ ಯಾವುದೇ ಹಾನಿ ಉಂಟಾಗದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಅವರು ಮುಂದುವರಿದು ಕಟ್ಟೆ ಬಲಪಡಿಸುವ ತುರ್ತು ಕಾಮಗಾರಿಗಳನ್ನು ಕೈಗೊಳ್ಳಿ, ಮಳೆ ನೀರು ಹರಿಸುವ ವ್ಯವಸ್ಥೆಯನ್ನು ಸುಗಮಗೊಳಿಸಿ, ರೈತರ ಜಮೀನುಗಳಿಗೆ ನೀರು ನುಗ್ಗದಂತೆ ಸ್ಥಳೀಯ ಗ್ರಾಮ ಅಧಿಕಾರಿಗಳು ಸಂಯೋಜಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯಪಾಲಕ ಇಂಜಿನಿಯರ್ ಅನಿಲ್ ರಾಥೋಡ್, ಪಿಡಿಓ ದಯಾನಂದ ಎಸ್. ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


